ಕೂಡಿಗೆ, ಅ. 13: ಇಲ್ಲಿಗೆ ಸಮೀಪದ ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಕ್ಕಳ ಗ್ರಾಮ ಸಭೆಯು ಹೆಬ್ಬಾಲೆ ಸಮುದಾಯದ ಭವನದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ರೂಪಿತ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಯ ಸಮಸ್ಯೆಗಳಾದ ತಡೆಗೋಡೆ, ಶೌಚಾಲಯದ ವ್ಯವಸ್ಥೆ, ಕುಡಿಯುವ ನೀರಿನ ಸರಬರಾಜು ಮಾಡುವ ಬಗ್ಗೆ ತಿಳಿಸಿದರು.

ಹೆಬ್ಬಾಲೆ ಪ್ರೌಢಶಾಲೆಯು ಈ ವ್ಯಾಪ್ತಿಯ ಪರೀಕ್ಷಾ ಕೇಂದ್ರವಾಗಿದ್ದು, ಇಲ್ಲಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಶಾಲೆಯ ವಿದ್ಯಾರ್ಥಿಗಳು ಸಭೆಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಮಾತನಾಡಿ, ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಹೆಚ್ವಿನ ಸೌಲಭ್ಯಗಳನ್ನು ಒದಗಿಸಲಾಗಿದೆ. ಮುಂದಿನ ಮಾಸಿಕ ಸಭೆಯಲ್ಲಿ ಹೆಚ್ಚು ಹಣವನ್ನು ಕಾಯ್ದಿರಿಸಿ ಉಳಿದ ಕಾಮಗಾರಿ ಮಾಡುವ ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುಂದಿನ ದಿನಗಳಲ್ಲಿ ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳನ್ನು ನೀಡುವ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಮಕ್ಕಳ ಹಕ್ಕುಗಳ ಬಗ್ಗೆ ಚರ್ಚೆ ಮಾಡಿದರು. ಮಕ್ಕಳ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಯ ಮಕ್ಕಳು, ಗ್ರಾಮ ಪಂಚಾಯಿತಿ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.