ಮಡಿಕೇರಿ, ಅ. 16: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಾ. 17 ರಂದು (ಇಂದು) ಜಿಲ್ಲೆಗೆ ಭೇಡಿ ನೀಡಲಿದ್ದು, ಬೆಳಿಗ್ಗೆ 11.30 ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಜಿಲ್ಲೆಯ ಪ್ರಕೃತಿ ವಿಕೋಪ ಸಂತ್ರಸ್ತರೊಂದಿಗೆ ಸಂವಾದ ನಡೆಸಲಿದ್ದಾರೆ.

ಈ ಸಂದರ್ಭ ಪ್ರವಾಸೋದ್ಯಮ ಮತ್ತು ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್, ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎ. ಬೋಜೇಗೌಡ, ಆಯನೂರು ಮಂಜುನಾಥ್, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್, ಸಂಸದ ಪ್ರತಾಪ್ ಸಿಂಹ, ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.

ಸಂವಾದ ಕಾರ್ಯಕ್ರಮಕ್ಕೆ ಜಿಲ್ಲೆಯ ಪ್ರಕೃತಿ ವಿಕೋಪ ಸಂತ್ರಸ್ತರು ಹಾಗೂ ಸಾರ್ವಜನಿಕರು, ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು (ಎನ್.ಜಿ.ಒ), ದಾನಿಗಳು, ಚೇಂಬರ್ ಆಫ್ ಕಾಮರ್ಸ್, ಭಾರತೀಯ ಕೈಗಾರಿಕೆಗಳ ಒಕ್ಕೂಟ, ಹೊಟೇಲ್ ಮಾಲೀಕರ ಸಂಘ ಮತ್ತಿತರ ಸಂಘಟನೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಕೋರಿದ್ದಾರೆ.