ವೀರಾಜಪೇಟೆ, ಅ. 17: ವಿದ್ಯಾರ್ಥಿಗಳು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಶ್ರದ್ಧೆ ಮತ್ತು ಛಲದಿಂದ ತಮ್ಮ ಗುರಿಯನ್ನು ಸಾದಿಸುವಂತಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು.

ಪದವಿಪೂರ್ವ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಸರಕಾರಿ ಪದವಿಪೂರ್ವ ಕಾಲೇಜು ವೀರಾಜಪೇಟೆ, ಸಮೀಪದ ಆರ್ಜಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2018-19ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಗಿಡಕ್ಕೆ ನೀರು ಎರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಮಹೇಶ್ ಗಣಪತಿ, ಪ್ರತಿಯೊಬ್ಬ ವಿದ್ಯಾರ್ಥಿಯು ಸ್ವಚ್ಛತೆಯ ಕಡೆಗೆ ಗಮನ ಹರಿಸುವ ಮೂಲಕ ಮಹಾತ್ಮ ಗಾಂಧೀಜಿ ಅವರ ಕನಸನ್ನು ನನಸು ಮಾಡಬೇಕು. ಗುರು-ಹಿರಿಯರಿಗೆ ಗೌರವ ನೀಡುವ ಮೂಲಕ ಕೊಡಗಿನ ಪ್ರಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವಂತಾಗಬೇಕು ಎಂದರು.

ನಾಪೋಕ್ಲು ಸ.ಪ.ಪೂ. ಕಾಲೇಜಿನ ಉಪನ್ಯಾಸಕರಾದ ಬೊಜ್ಜಂಗಡ ಡಾ. ಅವನಿತ ಸೋಮಯ್ಯ, ವಿದ್ಯಾರ್ಥಿಗಳು ಎನ್.ಎಸ್.ಎಸ್. ಶಿಬಿರದಲ್ಲಿ ಕಲಿತ ನಾಯಕತ್ವದ ಉತ್ತಮ ಗುಣಗಳನ್ನು ತಮ್ಮ ಜೀವನದಲ್ಲಿಯೂ ಅಳವಡಿಸಿ ಕೊಳ್ಳುವಂತಾಗಬೇಕು ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ ಮಾತನಾಡಿ, ವಿದ್ಯಾರ್ಥಿಗಳು ಹೆಚ್ಚು ಜ್ಞಾನವನ್ನು ಪಡೆದುಕೊಂಡು. ಏಳು ದಿನಗಳು ಶಿಬಿರದಲ್ಲಿ ಕಲಿತ ಗುಣಗಳನ್ನು ಅಳವಡಿಸಿಕೊಳ್ಳುವಂತೆ ಹೇಳಿದರು. ತಾಲೂಕು ಪಂಚಾಯಿತಿ ಸದಸ್ಯ ಬಿ.ಎಂ. ಗಣೇಶ್, ಆರ್ಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎನ್. ಗಾಯತ್ರಿ, ವೀರಾಜಪೇಟೆ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಎನ್.ಕೆ. ಜೋತಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತ ಅವರುಗಳು ಸಭೆಯನ್ನುದ್ದೇಶಿಸಿ ಮಾತನಾಡಿದರು.

ಎನ್.ಎಸ್.ಎಸ್. ಶಿಬಿರಾಧಿಕಾರಿ ಎಂ. ದಿನೇಶ್ ಸ್ವಾಗತಿಸಿದರು. ವಿದ್ಯಾರ್ಥಿ ಎಂ. ರಾಹುಲ್ ನಿರೂಪಿಸಿ, ಅನುಷ ವಂದಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು.