ಮಡಿಕೇರಿ, ಅ. 17: ವಿದ್ಯಾರ್ಥಿಗಳು ತಮ್ಮನ್ನು ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆ ಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಭವಿಷ್ಯತ್ತಿನಲ್ಲಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಲು ಸಂಕಲ್ಪ ತೊಡಬೇಕು ಎಂದು ಮಡಿಕೇರಿ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಕರೆ ನೀಡಿದರು. ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಕಾಟಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದು ವಾರ ಕಾಲ ಹಮ್ಮಿಕೊಂಡಿರುವ ಎನ್.ಎಸ್. ಎಸ್. ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಶಿಬಿರಗಳು ಯುವ ಜನಾಂಗದಲ್ಲಿ ಸೃಜನಶೀಲತೆ, ಕ್ರಿಯಾಶೀಲತೆ ಬೆಳೆಸುವದರೊಂದಿಗೆ ಉತ್ತಮ ವ್ಯಕ್ತಿತ್ವ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ್ ಮಾತನಾಡಿ, ಶಿಬಿರದಲ್ಲಿ ಶಿಬಿರಾರ್ಥಿ ಗಳು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ಕೈಗೊಂಡು ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ ಎಂದರು.

ಕಾವೇರಿ ಸೇನೆಯ ಸಂಚಾಲಕ ರವಿ ಚಂಗಪ್ಪ ಮಾತನಾಡಿ, ವಿದ್ಯಾರ್ಥಿಗಳು ತಮ್ಮನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಇಂತಹ ಶಿಬಿರಗಳು ಸೂಕ್ತ ವೇದಿಕೆ ಒದಗಿಸುತ್ತವೆ ಎಂದರು.

ತಾಲೂಕು ಪಂಚಾಯಿತಿ ಸದಸ್ಯೆ ಕೊಡಪಾಲು ಗಣಪತಿ ಮಾತನಾಡಿ, ಇಂತಹ ಶಿಬಿರಗಳಿಗೆ ಗ್ರಾಮಸ್ಥರು ಹೆಚ್ಚಿನ ಸಹಕಾರ ನೀಡಬೇಕು ಎಂದರು. ಗ್ರಾಮ ಪಂಚಾಯಿತಿ ಸದಸ್ಯ ಮುದ್ಯನ ಬಿ. ಚಂದ್ರಶೇಖರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಎ.ಪಿ. ಧನಂಜಯ, ಎಸ್.ಡಿ.ಎಂ.ಸಿ. ಅಧ್ಯಕ್ಷ ಎನ್.ಬಿ. ನಂದಕುಮಾರ್, ಮುಖ್ಯ ಶಿಕ್ಷಕಿ ಜಾನಕಿ, ಎನ್.ಎಸ್.ಎಸ್. ಕಾರ್ಯ ಕ್ರಮ ಅಧಿಕಾರಿ ಬಿ.ಡಿ. ರವೀಶ್, ಉಪನ್ಯಾಸಕ ಎಸ್. ನಂದೀಶ್ ಇದ್ದರು.

ವಿದ್ಯಾರ್ಥಿಗಳು ಎನ್.ಎಸ್. ಎಸ್. ಗೀತೆ ಹಾಡಿದರು. ಶಿಬಿರದಲ್ಲಿ ವಿದ್ಯಾರ್ಥಿಗಳು ಶಾಲಾ ಆವರಣ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ಕೈಗೊಂಡರು.