ಮಡಿಕೇರಿ, ನ. 14: ಮಹಿಳೆಯರ ಮೇಲೆ ನಡೆಯುವ ಕೌಟುಂಬಿಕ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೌಟುಂಬಿಕ ದೌರ್ಜನ್ಯದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಸರ್ಕಾರೇತರ ಸಂಸ್ಥೆಗಳು ಮಹಿಳೆಯರಿಗೆ ಕಾನೂನುಗಳ ಬಗ್ಗೆ ಮಾಹಿತಿ ನೀಡುವಂತಾಗಬೇಕು ಎಂದು ಅವರು ತಿಳಿಸಿದರು.

ವಕೀಲೆ ಮೀನಾ ಕುಮಾರಿ ಮಾತನಾಡಿ ಕೌಟುಂಬಿಕ ಹಿಂಸೆ ಅಥವಾ ಕಚೇರಿಯಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ಬಗ್ಗೆ 3 ತಿಂಗಳೊಳಗೆ ದೂರು ನೀಡು ವಂತಾಗಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವದು ಅತ್ಯಗತ್ಯ ಎಂದು ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ.ಪಿ. ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಬೇಕು ಎಂದು ತಿಳಿಸಿದರು.

ಮಹಿಳಾ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ 15 ದಿನಗಳೊಳಗೆ ಸಮಿತಿ ರಚನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರಲ್ಲದೆ ಮಹಿಳಾ ಗ್ರಾಮ ಸಭೆಗಳಲ್ಲಿ ಸಮಸ್ಯೆ ಗಳು ಇತ್ಯರ್ಥ ಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ರಾಜ್ಯದಲ್ಲಿ 2007 ರಿಂದ ಜಾರಿಯಲ್ಲಿದ್ದು. ಈ ಯೋಜನೆಯ ಉದ್ದೇಶವು ಮಹಿಳೆಯರ ಹಕ್ಕುಗಳನ್ನು ಪರಿಣಾಮಕಾರಿಯಾಗಿ ರಕ್ಷಿಸಲು, ಕುಟುಂಬದೊಳಗೆ ನಡೆಯುವ ಯಾವದೇ ದೌರ್ಜನ್ಯಗಳಿಂದ ರಕ್ಷಿಸಲು ಹಾಗೂ ದೈಹಿಕ, ಲೈಂಗಿಕ, ಮೌಖಿಕ, ಭಾವನಾತ್ಮಕ ಮತ್ತು ಆರ್ಥಿಕ ದೌರ್ಜನ್ಯಗಳಿಂದ ರಕ್ಷಿಸುವದಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಮೂರು ತಾಲೂಕುಗಳಲ್ಲಿ ಸಾಂತ್ವನ ಕೇಂದ್ರಗಳಲ್ಲಿ ನೊಂದ ಮಹಿಳೆಯರಿಗೆ ಉಚಿತ ಕಾನೂನು ಸೇವೆ, ಕೌಟುಂಬಿಕ ಸಲಹೆ, ಆಪ್ತ ಸಮಾಲೋಚನೆ ಹಾಗೂ ಅಲ್ಪಾವಧಿ ಪುನರ್ವಸತಿಯನ್ನು ನೀಡಲಾಗುತ್ತಿದೆ ಎಂದು ಮಮ್ತಾಜ್ ಮಾಹಿತಿ ನೀಡಿದರು.

ಪ್ರಕರಣಗಳ ಇತ್ಯಾರ್ಥ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ ಇದುವರೆಗೆ ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ 936 ಪ್ರಕರಣಗಳು ದಾಖಲಾಗಿದ್ದು 743 ಪ್ರಕರಣಗಳು ಇತ್ಯರ್ಥವಾಗಿದೆ. 83 ಪ್ರಕರಣಗಳು ಸಂರಕ್ಷಣಾಧಿಕಾರಿಯವರ ಹಂತದಲ್ಲಿದೆ. ಹಾಗೆಯೇ 24 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇದೆ. 34 ಪ್ರಕರಣಗಳು ನ್ಯಾಯಾಧೀಶ ರಿಂದ ಇತ್ಯರ್ಥವಾಗಿದೆ. 6 ಪ್ರಕರಣಗಳು ವಜಾಗೊಂಡಿದ್ದು 46 ಪ್ರಕರಣಗಳು ಕಾನೂನು ಸಲಹೆಯಿಂದ ಇತ್ಯರ್ಥಗೊಂಡಿದ್ದು, 107 ಪ್ರಕರಣಗಳು ಬಾಕಿ ಇವೆ ಎಂದು ಮಾಹಿತಿ ನೀಡಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣೆ ಕಾಯ್ದೆಯಡಿ ಪ್ರಸಕ್ತ ವರ್ಷ ಏಪ್ರಿಲ್‍ನಿಂದ ಇಲ್ಲಿಯವರೆಗೆ 102 ಪ್ರಕರಣಗಳು ದಾಖಲಾಗಿದ್ದು, 52 ಪ್ರಕರಣಗಳು ಇತ್ಯರ್ಥಗೊಂಡಿದ್ದು, 50 ಪ್ರಕರಣಗಳು ಬಾಕಿ ಇವೆ ಎಂದು ಅವರು ಮಾಹಿತಿ ನೀಡಿದರು.

ಜಿ.ಪಂ. ಸಿಇಒ ಲಕ್ಷ್ಮಿಪ್ರಿಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೊ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಮಾಯಾದೇವಿ ಗಲಗಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ. ಶಿವಕುಮಾರ್, ಕಾರ್ಮಿಕ ಅಧಿಕಾರಿ ಯತ್ನಟಿ, ಸಿಡಿಪಿಒ ಗಳಾದ ಸವಿತಾ, ಶೀಲಾ, ಸೀತಾಲಕ್ಷ್ಮಿ, ಒಡಿಪಿ ಸಂಸ್ಥೆಯ ಜಾಯ್ಸ್ ಮೇನೆಜಸ್, ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ಇತರರು ಇದ್ದರು.

ಬಾಲ್ಯ ವಿವಾಹ ತಡೆ

ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಯುವದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆದ್ದರಿಂದ ಎಲ್ಲರೂ ಬಾಲ್ಯ ವಿವಾಹ ತಡೆಯಲು ಕೈಜೋಡಿಸಬೇಕಿದೆ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ನಡೆದ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ. ಅವರು ಜಿಲ್ಲೆಯ ಹಾಡಿಗಳಲ್ಲಿ ಬಾಲ್ಯ ವಿವಾಹ ತಡೆ ಬಗ್ಗೆ ಹೆಚ್ಚಿನ ಅರಿವು ಮೂಡಿಸುವಂತಾ ಗಬೇಕು ಎಂದು ಸಲಹೆ ಮಾಡಿದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಅಬ್ದುಲ್ ಲತೀಫ್ ಬಾಲ್ಯ ವಿವಾಹಿ ತರಿಗೆ ತಾಯಿ ಕಾರ್ಡ್ ನೀಡುತ್ತಾರೆ ಎಂದು ಸಭೆಯ ಗಮನಕ್ಕೆ ತಂದರು. ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಇದುವರೆಗೆ 53 ದೂರುಗಳಲ್ಲಿ 48 ಬಾಲ್ಯವಿವಾಹ ಪ್ರಕರಣಗಳನ್ನು ತಡೆಯಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು.

ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಮಾಹಿತಿ ನೀಡಿ ಮದುವೆ ಕಾರ್ಯ, ಮಾಂಗಲ್ಯ ಧಾರಣೆ ಕಾರ್ಯಕ್ರಮ ನಡೆಸುವಾಗ ವಧುವರರ ವಯಸ್ಸನ್ನು ಖಾತ್ರಿಪಡಿಸಿಕೊಳ್ಳಲು ಮತ್ತು ಬಾಲ್ಯ ವಿವಾಹಕ್ಕೆ ಯಾವದೇ ಅವಕಾಶ ನೀಡದಿರುವ ಬಗ್ಗೆ ಸರ್ಕಾರದಿಂದ ಹೊರಡಿಸಿರುವ ವಿಶೇಷ ಸೂಚನಾ ಪತ್ರಗಳನ್ನು ಹಾಗೂ ಶಾಶ್ವತ ಬೋರ್ಡ್‍ನ ಪ್ರತಿಯನ್ನು ಅಳವಡಿಸಲು ಸೂಕ್ತ ಕ್ರಮ ಕೈಗೊಳ್ಳಲು ಮೂರು ತಾಲೂಕಿನ ಇಒಗಳಿಗೆ ಗ್ರಾ.ಪಂ. ಪಿಡಿಓಗಳಿಗೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ನೀಡಲಾಗಿದೆ ಎಂದು ಅವರು ಹೇಳಿದರು.