ಕುಶಾಲನಗರ, ನ. 15: ಕುಶಾಲನಗರ ಸಮೀಪದ ಬಸವನಹಳ್ಳಿಯ ಗಿರಿಜನ ವಿವಿಧೋದ್ದೇಶ ಸಹಕಾರ ಸಂಘದ ಆವರಣದಲ್ಲಿ ತಾ. 27 ರಂದು ಆದಿವಾಸಿ ಜನಾಂಗದ ನೇತಾರ, ಭಾರತದ ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ 143ನೇ ಜನ್ಮದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಮೂಲ ಆದಿವಾಸಿಗಳ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಪ್ರಕಾಶ್ ಹೇಳಿದರು.

ಕುಶಾಲನಗರದ ಕಾರ್ಯನಿರತ ಪತ್ರಕರ್ತರ ಸಂಘದ ಸುದ್ದಿಮನೆಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ತಾ. 15 ರಂದು ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯನ್ನು ಮಾಡಬೇಕೆಂಬ ಉದ್ದೇಶ ಇತ್ತು. ಕೆಲವು ಕಾರಣಗಳಿಂದ ಆ ದಿನ ಕಾರ್ಯಕ್ರಮ ಮುಂದೂಡಲಾಗಿದ್ದು, ತಾ. 27 ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವೇದಿಕೆಯ ಕಾರ್ಯಾಗಾರಕ್ಕೆ ಜನಪ್ರತಿನಿಧಿಗಳು ಮತ್ತು ನಾಲ್ಕು ಮಂದಿ ರಾಜ್ಯ ಸರ್ಕಾರದ ಸಚಿವರು ಭಾಗವಹಿಸಲಿದ್ದಾರೆ. ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ಈಗಾಗಲೇ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಒಪ್ಪಿಗೆ ನೀಡಿದ್ದಾರೆ. ಅದೇ ರೀತಿ ಸಮಾಜ ಕಲ್ಯಾಣ ಇಲಾಖೆಯ ಸಚಿವ ಪ್ರಿಯಾಂಕ ಖರ್ಗೆ ಅವರು ಕೂಡ ಸಭೆಯಲ್ಲಿ ಭಾಗವಹಿಸುತ್ತಾರೆ. ಸುಮಾರು ಮೂರು ಸಾವಿರಕ್ಕು ಅಧಿಕ ಸಂಖ್ಯೆಯಲ್ಲಿ ಕೊಡಗು, ಹಾಸನ ಮತ್ತು ಚಾಮರಾಜನಗರ ಮೂರು ಜಿಲ್ಲೆಗಳ ಆದಿವಾಸಿ ಮುಖಂಡರು, ಕಾರ್ಯಕರ್ತರು ಭಾಗವಹಿಸುತ್ತಾರೆ. ಸಂಘಟನೆಯ ವತಿಯಿಂದ ಸಾಮಾಜಿಕ ಹೋರಾಟಗಾರರಿಗೆ ಹಾಗೂ ಆದಿವಾಸಿ ಸಮುದಾಯದ ಏಳಿಗೆಗೆ ಶ್ರಮಿಸಿದ ಹೋರಾಟಗಾರರಿಗೆ ಸನ್ಮಾನಿಸುವ ಉದ್ದೇಶವು ಇದೆ. ಬಿರ್ಸಾ ಮುಂಡಾ ಅವರ ಜನ್ಮದಿನಾಚರಣೆಯನ್ನು ಮುಂದಿನ ದಿನಗಳಲ್ಲಿ ತಾ. 15 ರಂದು ರಾಜ್ಯ ಸರ್ಕಾರ ಬಿರ್ಸಾ ಮುಂಡಾ ಜಯಂತಿಯೆಂದು ಆಚರಿಸಲು ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಾದ್ಯಂತ ಇರುವ ಜನಪ್ರತಿನಿಧಿಗಳು, ಶಾಸಕರು, ಸಂಸದರು ಸೇರಿದಂತೆ ಬಸವನಹಳ್ಳಿ ಗಿರಿಜನ ಸಹಕಾರ ಸಂಘದ ಅಧ್ಯಕ್ಷ ಎಸ್.ಎನ್. ರಾಜಾರಾವ್ ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷ ಜಿ.ಕೆ. ಗೋಪಾಲ ಪೂಜಾರಿ, ರಾಜ್ಯ ಸೋಲಿಗ ಅಭಿವೃದ್ಧಿ ಸಂಘದ ಕಾರ್ಯದರ್ಶಿ ಶಾಂತರಾಜು, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಮೋಹನ್‍ಕುಮಾರ್ ಇದ್ದರು.