ಕೂಡಿಗೆ, ನ. 19 : ಕೂಡಿಗೆ ಗ್ರಾಮ ಪಂಚಾಯಿತಿಯಲ್ಲಿ ಸಂಸದ್ ಆದರ್ಶ ಯೋಜನೆಯಡಿಯ ಕ್ರಿಯಾಯೋಜನೆ ತಯಾರಿಸುವ ಸಂಬಂಧ ಗ್ರಾಮ ಪಂಚಾಯಿತಿ ಆಡಳಿತ ವರ್ಗ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ವಿಶೇಷ ಸಭೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲ ಅಧ್ಯಕ್ಷತೆಯಲ್ಲಿ ನಡೆಯಿತು.

ಕೂಡಿಗೆ ಗ್ರಾಮ ಪಂಚಾಯ್ತಿಗೆ ಸಂಸದ್ ಆದರ್ಶ ಯೋಜನೆಯಲ್ಲಿ ಪರಿಣಾಮಕಾರಿಯಾಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಕಾಮಗಾರಿಗಳ ಕ್ರಿಯಾಯೋಜನೆಗಳನ್ನು ವಿಶೇಷ ಸಭೆಯಲ್ಲಿ ತಯಾರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸಂಸದ್ ಆದರ್ಶ ಯೋಜನೆಯಡಿಯಲ್ಲಿ 1 ಕೋಟಿ ರೂ. ಹಣಕ್ಕೆ ಮಂಜೂರಾತಿ ದೊರೆತಿದ್ದು, ಈ ಹಣದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಿದರು.

ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಸಂಸದ್ ಆದರ್ಶ ಯೋಜನೆಗೆ ಸಂಬಂಧಪಟ್ಟಂತೆ ಸರ್ಕಾರದ ಯೋಜನೆಗಳನ್ನು ಸವಿಸ್ತಾರವಾಗಿ ಮಾಹಿತಿ ನೀಡಿದರು.

ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯೆ ಸಬಿತಾ ಚನ್ನಕೇಶವ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಗಿರೀಶ್‍ಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಹಾಗೂ ಜಿಲ್ಲಾ ಪಂಚಾಯಿತಿಯ ಅಧೀನಕ್ಕೆ ಬರುವ ತಾಲೂಕು ಪಂಚಾಯಿತಿಯ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಇದ್ದರು.