ಮನು ಮುತ್ತಪ್ಪ
ನಾಪೆÇೀಕ್ಲು, ಡಿ. 9: ವಿದ್ಯಾರ್ಥಿಗಳನ್ನು ಪರಿವರ್ತನೆ ಮಾಡುವದರ ಮೂಲಕ ದೇಶವನ್ನು ಪರಿವರ್ತನೆ ಮಾಡಬಹುದು ಎಂದು ನೇತಾಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅಭಿಪ್ರಾಯಪಟ್ಟರು.
ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಒಂದು ವಾರಗಳ ಕಾಲ ನಡೆಯಲಿರುವ ಶಿಕ್ಷಕರ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಂದು ಸಮಾಜದಲ್ಲಿ ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದು, ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಮಾರ್ಗದರ್ಶನದ ಕೊರತೆ ಇದೆ. ಶಿಕ್ಷಕರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಪಡೆಯುವದರ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿ, ದೇಶವನ್ನು ಕಟ್ಟುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದು. ಮಕ್ಕಳನ್ನು ಸದ್ಗುಣಗಳೊಂದಿಗೆ ಬೆಳೆಸುವ ಅಗತ್ಯವಿದೆ.
ಕಷ್ಟದಲ್ಲಿರುವವರಿಗೆ ಸ್ಪಂದಿಸುವ ಮಾನವೀಯ ಗುಣವನ್ನು ಬೆಳೆಸಿಕೊಳ್ಳಬೇಕಾಗಿದೆ. ಮಕ್ಕಳಲ್ಲಿ ಶ್ರದ್ಧೆ ಸಂಯಮ ಆತ್ಮವಿಶ್ವಾಸವನ್ನು ಬೆಳೆಸುವದರ ಮೂಲಕ ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿಯನ್ನು ಶಿಕ್ಷಕರು ವಹಿಸಿಕೊಳ್ಳಬೇಕಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಸದಸ್ಯೆ ಕೋಡಿಯಂಡ ಇಂದಿರಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ, ಮುಖ್ಯ ಶಿಕ್ಷಕ ಕುಮಾರಸ್ವಾಮಿ ಮಾತನಾಡಿದರು.
ಗಿಡಕ್ಕೆ ನೀರೆರೆವದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸ ಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಆಯುಕ್ತ ಕೆ.ಬಿ. ಕಾಳಪ್ಪ ಅಧ್ಯಕ್ಷತೆ ವಹಿಸಿದ್ದರು.
ಕೆ.ಬಿ. ರಂಜಿತ್, ಜಿಲ್ಲಾ ಸಂಸ್ಥೆಯ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸೀಕ್ವೇರಾ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಶಿಕ್ಷಕರು, ನೇತಾಜಿ ವಿದ್ಯಾಸಂಸ್ಥೆಯ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡಿದ್ದರು.