ಸೋಮವಾರಪೇಟೆ, ಡಿ. 28: ವಾಹನ ಸವಾರರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸಬೇಕೆಂದು ಪೊಲೀಸ್ ಠಾಣಾಧಿಕಾರಿ ಶಿವಶಂಕರ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ಬಿ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ತ್ರೈಮಾಸಿಕ ಸಭೆಯಲ್ಲಿ ಭಾಗವಹಿಸಿ, ಅಪರಾಧ ತಡೆ ಮಾಸಾಚರಣೆಯ ಬಗ್ಗೆ ಅವರು ಮಾತನಾಡಿದರು.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಬಾರದು. ಮೊಬೈಲ್‍ನಲ್ಲಿ ಮಾತನಾಡುತ್ತಾ ವಾಹನ ಚಾಲನೆ ಅಪರಾಧ. ಬೈಕ್ ಸವಾರರಿಗೆ ಹೆಲ್ಮೆಟ್ ಕಡ್ಡಾಯ, ಕಾರು ಚಾಲಕರಿಗೆ ಸೀಟ್ ಬೆಲ್ಟ್ ಕಡ್ಡಾಯ ಎಂದ ಅವರು, ಅಪರಾಧ ತಡೆಗಟ್ಟುವಿಕೆಯಲ್ಲಿ ಸಾರ್ವಜನಿಕರು ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದರು.

ಹದಿನೆಂಟು ವರ್ಷದ ಒಳಗಿನ ಮಕ್ಕಳು ದ್ವಿಚಕ್ರ ವಾಹನ ಓಡಿಸುವದು ಕಂಡು ಬಂದಲ್ಲಿ ದಂಡವನ್ನು ವಿಧಿಸಲಾಗುತ್ತದೆ. ಪೋಷಕರು ಅಪ್ರಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ನೀಡಬಾರದು ಎಂದು ಮಾಹಿತಿ ನೀಡಿದರು.

ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ನಾಗಮ್ಮ, ಪೊಲೀಸ್ ಇಲಾಖೆಯ ಜಗದೀಶ್, ಒಕ್ಕೂಟದ ಪದಾಧಿಕಾರಿಗಳು, ವಲಯದ ಮೇಲ್ವಿಚಾರಕ ರಮೇಶ್, ಸೇವಾ ಪ್ರತಿನಿಧಿ ಎಂ.ಎ. ರುಬೀನಾ, ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.