ಕುಶಾಲನಗರ, ಡಿ. 27: ಕರ್ನಾಟಕ ರಾಜ್ಯ ಮೂಲ ಆದಿವಾಸಿಗಳ ರಕ್ಷಣಾ ವೇದಿಕೆ ಕೊಡಗು ಜಿಲ್ಲೆ, ಗಿರಿಜನ ದೊಡ್ಡಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬಸವನಹಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಈ ತಿಂಗಳ 29 ರಂದು ಬಿರ್ಸಾಮುಂಡ ಅವರ 143ನೇ ಜಯಂತಿ ಉತ್ಸವ ಆಚರಣೆ ಬಸವನಹಳ್ಳಿ ಗಿರಿಜನ ದೊಡ್ಡಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಸ್.ಎನ್. ರಾಜಾರಾವ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಆದಿವಾಸಿಗಳು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಗುಡ್ಡೆಹೊಸೂರಿನಿಂದ ವೇದಿಕೆವರೆಗೆ ಮೆರವಣಿಗೆ ನಡೆಯಲಿದೆ. ಕಾರ್ಯ ಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು, ಆದಿವಾಸಿ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಗುವದು ಎಂದರು.

ಅಂದು ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮೂಲ ಆದಿವಾಸಿಗಳ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಜೆ.ಎಲ್. ರಮೇಶ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯ ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕರುಗಳಾದ ಅಪ್ಪಚ್ಚುರಂಜನ್, ಕೆ.ಜಿ. ಬೋಪಯ್ಯ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ರಾಜ್ಯ ಸರಕಾರದ ವತಿಯಿಂದ ಪ್ರತಿ ನವೆಂಬರ್ ತಿಂಗಳಲ್ಲಿ ಬಿರ್ಸ ಮುಂಡ ಜಯಂತಿ ಆಚರಣೆಗೆ ಕ್ರಮಕೈಗೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಮೂಲ ಆದಿವಾಸಿಗಳ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಜೆ.ಎಲ್. ರಮೇಶ್ ಮಾತನಾಡಿ, ಜಿಲ್ಲೆಯಲ್ಲಿರುವ ಆದಿವಾಸಿಗಳ ಅಸ್ತಿತ್ವ ಪ್ರತಿಪಾದಿಸುವ ಕಾರ್ಯಕ್ರಮ ಇದಾಗಿದೆ ಎಂದರು.

ಆದಿವಾಸಿ ಪ್ರಮುಖರಾದ ಸ್ವಾಮಿ, ಬಾಳೆಗುಂಡಿ ರಮೇಶ್, ಚಿನ್ನೇನಹಳ್ಳಿ ಈರಪ್ಪ ಇದ್ದರು.