ಕುಶಾಲನಗರ, ಡಿ. 28: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ನಗರ ಬಿಜೆಪಿ ಘಟಕದಿಂದ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಲಾಯಿತು. ಪಟ್ಟಣದ ಸರಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕರ್ತರೊಡಗೂಡಿ ಶಾಸಕ ಅಪ್ಪಚ್ಚು ರಂಜನ್ ಒಳರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಬಗ್ಗೆ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ 1600 ಮಂದಿ ಸೇರಿದಂತೆ ಜಿಲ್ಲೆಯಲ್ಲಿ 27 ಮಂದಿ ವೈದ್ಯರ ಕೊರತೆ ಉಂಟಾಗಿದೆ. ಪ್ರತಿ ವರ್ಷ ಸಾವಿರಾರು ಸಂಖ್ಯೆ ವೈದ್ಯರು ವಿದೇಶಗಳತ್ತ ಮುಖ ಮಾಡುತ್ತಿದ್ದಾರೆ. ವೈದ್ಯಕೀಯ ಶಿಕ್ಷಣ ಪೂರ್ಣಗೊಂಡ ಬಳಿಕ ಮೊದಲೆರೆಡು ವರ್ಷ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ವೈದ್ಯರುಗಳು ಸೇವೆ ಸಲ್ಲಿಸಬೇಕೆಂಬ ನಿಯಮ ಸಮರ್ಪಕವಾಗಿ ಜಾರಿಗೊಂಡಲ್ಲಿ ಈ ಸಮಸ್ಯೆ ಇತ್ಯರ್ಥವಾಗಲಿದೆ.
ಸ್ಥಳೀಯವಾಗಿ ಉಂಟಾಗಿರುವ ಸಮಸ್ಯೆ ಸಂಬಂಧ ಕೊಡಗು ಜಿಲ್ಲಾ ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸಮಸ್ಯೆ ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವದು ಎಂದರು. ಈ ಸಂದರ್ಭ ಮಾತನಾಡಿದ ಶಾಸಕ ರಂಜನ್, ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಮಾನವ ನಿರ್ಮಿತ ದುರಂತವಲ್ಲ ಎಂದ ಅವರು ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಪ್ರದೇಶಗಳ ಅಭಿವೃದ್ಧಿ ಕಾಮಗಾರಿಯನ್ನು ಹೊರಗಿನ ಗುತ್ತಿಗೆದಾರರಿಗೆ ನೀಡದೆ ಸ್ಥಳೀಯರಿಗೆ ಅವಕಾಶ ಕಲ್ಪಿಸಬೇಕೆಂದು ಉಸ್ತುವಾರಿ ಸಚಿವರಿಗೆ ಮನವಿ ಮಾಡಿರುವದಾಗಿ ತಿಳಿಸಿದರು.
ನಗರ ಬಿಜೆಪಿ ಅಧ್ಯಕ್ಷ ಕೆ.ಜಿ. ಮನು, ಉಪಾಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಜಿ.ಪಂ. ಸದಸ್ಯೆ ಮಂಜುಳಾ, ಪ್ರಮುಖರಾದ ಭಾಸ್ಕರ್ ನಾಯಕ್, ವಿ.ಡಿ. ಪುಂಡರೀಕಾಕ್ಷ, ಬಿ.ಎಸ್. ಶಿವಕುಮಾರ್, ವರದ, ವೈಶಾಖ್, ಎಂ.ವಿ. ನಾರಾಯಣ, ಉಮಾಶಂಕರ್, ವೈದ್ಯ ಡಾ. ಪ್ರತಾಪ್ ಮತ್ತಿತರರು ಇದ್ದರು.