ಕುಶಾಲನಗರ, ಡಿ. 28: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಜೀವನದ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜದ ಸತ್ಪ್ರಜೆಗಳಾಗಿ ಬಾಳಬೇಕಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಅಪ್ಪಚ್ಚು ರಂಜನ್ ಕರೆ ನೀಡಿದರು.

ಸ್ಥಳೀಯ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಮತ್ತು ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ತಮ್ಮ ಗಮನವನ್ನು ಅನಗತ್ಯ ವಿಷಯಗಳತ್ತ ಹರಿಯಬಿಡದೆ ಜ್ಞಾನಾರ್ಜನೆಯತ್ತ ಕೇಂದ್ರೀಕರಿಸಬೇಕು. ದ್ವೇಷ, ಅಸೂಯೆ, ಅತಿಯಾಸೆ, ಅಹಂಕಾರಗಳನ್ನು ಬದಿಗೊತ್ತಿ ವಿನಯವನ್ನು ಮೈಗೂಡಿಸಿಕೊಂಡು ವಿಶ್ವಾಸದ ವರ್ತನೆ ತೋರಬೇಕಿದೆ ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆಂಚಪ್ಪ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಧಾನ್ ಗೌತಮ್ ವಿದ್ಯಾಸಂಸ್ಥೆ ಕಾರ್ಯದರ್ಶಿ ಬಿ. ರಾಮಕೃಷ್ಣ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜು ಉಪನ್ಯಾಸಕ ಸಂಘದಿಂದ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ವಿದ್ಯಾಸಂಸ್ಥೆಯ ಪ್ರಮುಖರಾದ ಪಾರ್ವತಿ ಬೇಲೂರಯ್ಯ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಪ.ಪಂ. ಸದಸ್ಯರಾದ ಜಯವರ್ಧನ, ವಿ.ಎಸ್. ಆನಂದ್‍ಕುಮಾರ್, ಪೊಲೀಸ್ ಉಪ ಅಧೀಕ್ಷಕ ಪಿ.ಕೆ. ಮುರಳೀಧರ್, ಜಿ.ಪಂ. ಮಾಜಿ ಸದಸ್ಯ ವಿ.ಪಿ. ಶಶಿಧರ್, ಕೊಡಗು ಜಿಲ್ಲಾ ಪ.ಪೂ. ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್‍ವಾಸ್, ಕಾರ್ಯದರ್ಶಿ ಹಂಡ್ರಂಗಿ ನಾಗರಾಜ್, ಕಾಲೇಜು ಪ್ರಾಂಶುಪಾಲ ಎಸ್.ಟಿ. ಪುರುಷೋತ್ತಮ್ ಇದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.