ಸೋಮವಾರಪೇಟೆ, ಡಿ. 27: ತಾಲೂಕು ಒಕ್ಕಲಿಗರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆಯ ಬಿ.ಟಿ. ಚನ್ನಯ್ಯ ಗೌರಮ್ಮ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಉದ್ಘಾಟಿಸಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಪ್ರಮುಖವಾದುದು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿರಬೇಕು. ಓದಿನ ಕಡೆಗೆ ಹೆಚ್ಚಿನ ಗಮನ ನೀಡಬೇಕು. ತಮಗೆ ಸಿಗುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಸಾಧನೆಯ ಮೆಟ್ಟಿಲೇರಬೇಕು ಎಂದು ಕಿವಿಮಾತು ಹೇಳಿದರು.
ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ ಮಾತನಾಡಿ, ವಿದ್ಯಾಸಂಸ್ಥೆಯಲ್ಲಿ 750 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಒಕ್ಕಲುತನ ಮಾಡುತ್ತಿರುವ ಗ್ರಾಮೀಣ ಭಾಗದ ಜನರ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ಉದ್ದೇಶದಿಂದ ವಿದ್ಯಾಸಂಸ್ಥೆಯನ್ನು ಸ್ಥಾಪಿಸಲಾಗಿದೆ. ಹತ್ತನೆ ತರಗತಿಯಲ್ಲಿ ಎರಡು ಬಾರಿ ಶೇ. 100 ರಷ್ಟು ಫಲಿತಾಂಶ ಗಳಿಸಿದ್ದು, ಹ್ಯಾಟ್ರಿಕ್ ಸಾಧನೆ ಗುರಿಯಲ್ಲಿದ್ದೇವೆ ಎಂದರು.
ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನಾ ಭರತ್, ಪತ್ರಕರ್ತ ಹಿರಿಕರ ರವಿ ಅವರುಗಳನ್ನು ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಕ್ರೀಡೆ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸಿ.ಕೆ. ರಾಘವ, ಕಾರ್ಯದರ್ಶಿ ಎನ್.ಬಿ. ಗಣಪತಿ, ಖಜಾಂಚಿ ಸಿ.ಎಸ್. ಸುರೇಶ್, ಸಂಚಾಲಕ ಕೆ.ಎಂ. ಜಗದೀಶ್, 10 ಸೆಕೆಂಡ್ಸ್ ತರಬೇತಿ ಸಂಸ್ಥೆಯ ವ್ಯವಸ್ಥಾಪಕ ರಾಮ್ಪ್ರಸಾದ್, ಸಂಘದ ಪದಾಧಿಕಾರಿಗಳಾದ ಬಿ.ಕೆ. ಚಿಣ್ಣಪ್ಪ, ಕೆ.ಟಿ. ಪರಮೇಶ್, ಹೆಚ್.ಪಿ. ರಾಜಪ್ಪ, ಕೆ.ಎಸ್. ಮೋಹನ್, ಹರಿಣಿ ಕುಶಾಲಪ್ಪ, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಮಿಲ್ಡ್ರೆಡ್ ಗೋನ್ಸಾಲ್ವೆಸ್, ಕಾಲೇಜಿನ ಪ್ರಾಂಶುಪಾಲ ಹೆಚ್.ಎಸ್. ಶರಣ್ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.