ಮಡಿಕೇರಿ, ಡಿ.31 : ರಾಷ್ಟ್ರವನ್ನು 2025 ರ ವೇಳೆಗೆ ಕ್ಷಯರೋಗ ಮುಕ್ತ ದೇಶವನ್ನಾಗಿ ಮಾಡುವ ಉದ್ದೇಶದಿಂದ ಎರಡನೇ ಸುತ್ತಿನ ಸಕ್ರಿಯ ಕ್ಷಯರೋಗ ಆಂದೋಲನವನ್ನು ಜಿಲ್ಲೆಯಾದ್ಯಂತ ಯಶಸ್ವಿಗೊಳಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕ್ಷಯರೋಗ ಪತ್ತೆ ಆಂದೋಲನವನ್ನು ಜನವರಿ 2 ರಿಂದ 12 ರವರೆಗೆ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದು, ಕ್ಷಯರೋಗ ಪತ್ತೆ ಕಾರ್ಯದಲ್ಲಿ ಕಾಫಿ ತೋಟಗಳ ಲೈನ್ ಮನೆಗಳಲ್ಲಿ ವಾಸವಿರುವ ಕಾರ್ಮಿಕರನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಎರಡನೇ ಸುತ್ತಿನ ಆಂದೋಲನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಂಡು ಐಟಿಡಿಪಿ, ನಗರಸಭೆ, ಇಲಾಖೆಗಳ ಮೂಲಕ ಗಿರಿಜನ ಕಾಲೋನಿಗಳಲ್ಲಿ ಹಾಗೂ ನಗರ, ಪಟ್ಟಣ ವ್ಯಾಪ್ತಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಕ್ರೀಯ ಕ್ಷಯರೋಗ ಆಂದೋಲನದ ಭಿತ್ತಿ ಚಿತ್ರಗಳನ್ನು, ಕರಪತ್ರಗಳನ್ನು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಅನಾವರಣಗೊಳಿಸಿದರು. ನಗರಸಭೆ, ಪಟ್ಟಣ ಪಂಚಾಯಿತಿ, ಕಸ ಶೇಖರಣೆ ವಾಹನಗಳ ಮೂಲಕ ಪ್ರಚಾರ ಕಾರ್ಯ ಕೈಗೊಳ್ಳಲಾಗುವದು ಎಂದು ನಗರಸಭೆ ಆಯುಕ್ತರಾದ ರಮೇಶ್ ಅವರು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಶಿವಕುಮಾರ್, ಜಿಲ್ಲಾ ಕಾರಾಗೃಹ ಅಧೀಕ್ಷಕ ಕುಷ್ಠಗಿ, ಔಷಧ ನಿಯಂತ್ರಕ ಬಾಬು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಇತರರು ಇದ್ದರು.