ಕೂಡಿಗೆ, ಜ. 4: 2019-20ನೇ ಸಾಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಏಕಲವ್ಯ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಸರ್ಕಾರವು 2019-20ನೇ ಸಾಲಿನಲ್ಲಿ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವರ್ಗದ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳಿಗೆ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಏಕಲವ್ಯ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದ ಪ್ರ.ವರ್ಗ-1 ರ ವಿದ್ಯಾರ್ಥಿಗಳ ಕುಟುಂಬದವರ ವಾರ್ಷಿಕ ಆದಾಯ ರೂ. 2.50 ಲಕ್ಷ ಮೀರಿರಬಾರದು. ಪ್ರವರ್ಗ 2ಎ, 2ಬಿ, 3ಎ, 3ಬಿ. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 1 ಲಕ್ಷ ಮೀರಿರಬಾರದು.

ಅರ್ಜಿಯನ್ನು ಜಿಲ್ಲೆಯ ಎಲ್ಲ ವಸತಿ ಶಾಲೆಗಳಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಿಂದ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಜಿಲ್ಲೆಯ ಎಲ್ಲಾ ವಸತಿ ಶಾಲಾ ಪ್ರಾಂಶುಪಾಲರ ಕಚೇರಿಯಲ್ಲಿ 15.1.2019 ರಂದು ಸಂಜೆ 5.30 ಗಂಟೆಯೊಳಗಾಗಿ ಸಲ್ಲಿಸಬಹುದು.

ಪ್ರವೇಶ ಪರೀಕ್ಷೆಯು ತಾ. 10.3.2019 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ತಾಲೂಕು ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಅರ್ಜಿ ಹಾಗೂ ಹೆಚ್ಚಿನ ವಿವರಗಳನ್ನು ಪಡೆಯಲು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧಿಕೃತ ವೆಬ್‍ಸೈಟ್ ಗಮನಿಸಬಹುದು.