ಮಡಿಕೇರಿ, ಜ. 5: ತಾ. 10 ರಂದು ಜಿಲ್ಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಭೇಟಿ ನೀಡಿ ಅತಿವೃಷ್ಟಿಯಿಂದ ತೊಂದರೆಗೊಳಗಾದ ಕುಟುಂಬಗಳ ಜೊತೆ ಸಮಾಲೋಚನ ಸಭೆ ಮತ್ತು ಪರಿಹಾರ ಧನ ವಿತರಣಾ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಪೂರ್ವಭಾವಿ ಸಭೆ ಮಡಿಕೇರಿಯಲ್ಲಿ ನಡೆಯಿತು.

ಮಡಿಕೇರಿಯ ಮಹದೇವಪೇಟೆ ಯಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾನಂಗಡ ಅರುಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಉಪ ಸಮಿತಿಗಳ ಆಯ್ಕೆ ಮಾಡಲಾಯಿತು. ಸ್ಥಳೀಯ ಗಾಂಧಿ ಮೈದಾನದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾಲೋಚನಾ ಸಭೆ ನಡೆಯಲಿದ್ದು, ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತ್ರಸ್ತರಿಗೆ ಪರಿಹಾರ ಧನ ವಿತರಣೆ ಮಾಡುವರು.

ಶಾಸಕ ಕೆ.ಜಿ. ಬೋಪಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಸಂತ್ರಸ್ತರಿಗೆ ಪರಿಹಾರ ಕಾಮಗಾರಿ ಕೈಗೊಂಡ ಕಾರ್ಯಕರ್ತರಿಗೆ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅಭಿನಂದನೆ ಸಲ್ಲಿಸಲಿದ್ದಾರೆ. ಉಳಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದು ಈ ಹಿನ್ನೆಲೆ ಕಾರ್ಯಕ್ರಮ ಯಶಸ್ಸಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಸಭೆಯಲ್ಲಿ ತಿಳಿಸಿದರು.

ತಾ. 10 ರಂದು ಬೆಳಿಗ್ಗೆ 11 ಗಂಟೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರು ಜಿಲ್ಲೆಯ ಸಂತ್ರಸ್ತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ಯೋಗೀಶ್, ಈಗಾಗಲೇ ಬಹುತೇಕ ಪೂರ್ವ ಸಿದ್ಧತೆಗಳನ್ನು ನಡೆಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜನಜಾಗೃತಿ ಸಮಿತಿಯ ಸದಸ್ಯರಾದ ಅಜಯ್ ಸೂದ್, ರಂಗಸ್ವಾಮಿ, ಗುರುರಾಜ್, ಎಂ.ಎನ್. ಚಂದ್ರಮೋಹನ್, ನಗರಸಭೆ ಮಾಜಿ ಅಧ್ಯಕ್ಷ ಅಯ್ಯಪ್ಪ ಮತ್ತು ಯೋಜನೆಯ ಯೋಜನಾಧಿಕಾರಿಗಳು, ವಲಯ ಮೇಲ್ವಿಚಾರಕರು, ಒಕ್ಕೂಟದ ಸೇವಾ ಪ್ರತಿನಿಧಿಗಳು ಇದ್ದರು.