ಮಡಿಕೇರಿ, ಜ. 9: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರು ತಾ. 10 ರಂದು (ಇಂದು) ಮಡಿಕೇರಿಗೆ ಆಗಮಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಗಾಂಧಿ ಮೈದಾನದಲ್ಲಿ ಸಕಲ ಸಿದ್ಧತೆಗಳು ನಡೆದಿವೆ. ಬೆಳಿಗ್ಗೆ 10.30 ಗಂಟೆ ಸುಮಾರಿಗೆ ಆಗಮಿಸಲಿರುವ ವೀರೇಂದ್ರ ಹೆಗ್ಗಡೆಯವರು ಪ್ರಾಕೃತಿಕ ವಿಕೋಪಕ್ಕೊಳಗಾದ ಜೋಡುಪಾಲ, ಮದೆನಾಡು, ಮೊಣ್ಣಂಗೇರಿ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.ಪ್ರಾಕೃತಿಕ ವಿಕೋಪಕ್ಕೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಮಧ್ಯಾಹ್ನ 3 ಗಂಟೆಗೆ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿರುವ ಬೃಹತ್ ಸಮಾರಂಭದಲ್ಲಿ ಸಂತ್ರಸ್ತರಿಗೆ ಪರಿಹಾರ ವಿತರಣೆ ಮಾಡಿ ಬಳಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಮಾರಂಭದಲ್ಲಿ ಸುಮಾರು 5 ಸಾವಿರ ಮಂದಿ ಪಾಲ್ಗೊಳ್ಳಲಿದ್ದು, ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. 8 ಕೋಟಿ ರೂ. ಹಣವನ್ನು 2106 ಮಂದಿ ಸಂತ್ರಸ್ತರಿಗೆ ವೀರೇಂದ್ರ ಹೆಗ್ಗಡೆಯವರು ವಿತರಣೆ ಮಾಡಲಿದ್ದಾರೆ.