ಮಡಿಕೇರಿ, ಜ. 9: ಇದೇ ಫೆಬ್ರವರಿ 3 ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಶೇಕಡವಾರು ಯಶಸ್ಸಿಗೆ ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಕೋರಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಸಿದ್ಧತೆ ಕೈಗೊಳ್ಳುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋವನ್ನು ಕಡ್ಡಾಯವಾಗಿ ಹಾಕಬೇಕು, ಕೊಡಗು ಜಿಲ್ಲೆಯಿಂದ ಹೊರ ಹೋಗುವ ಹಾಗೂ ಬರುವ ವಲಸೆ ಮಕ್ಕಳು, ಜೊತೆಗೆ ಕಳೆದ ಬಾರಿ ಪಲ್ಸ್ ಪೋಲಿಯೊದಿಂದ ಹೊರಗುಳಿದ ಮಕ್ಕಳನ್ನು ಗುರ್ತಿಸಿ ಪಲ್ಸ್ ಪೋಲಿಯೋ ಹನಿ ಹಾಕಬೇಕು. ಜಿಲ್ಲೆಯ ಜನ ದಟ್ಟಣೆ ಇರುವ ಪ್ರದೇಶಗಳಲ್ಲಿ ತಂಡ ರಚಿಸಿ ಪಲ್ಸ್ ಪೋಲಿಯೋ ಹನಿ ಹಾಕುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಅಲ್ಲಲ್ಲಿ ಮನೆಗಳು ಇರುವದರಿಂದ ಮತ್ತು ಕುಗ್ರಾಮಗಳಿಗೆ ಪಲ್ಸ್ ಪೋಲಿಯೋ ಪೂರೈಕೆ ಮಾಡಲು ಅಗತ್ಯ ವಾಹನಗಳನ್ನು ಒದಗಿಸಬೇಕು. ಪೋಲಿಯೋ ಲಸಿಕೆ ಹಾಳಾಗದಂತೆ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲೆಯಲ್ಲಿ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಪಾತ್ರ ಮಹತ್ತರವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯ ವಿವಿಧ ಹಾಡಿಗಳು, ವಲ್ನರಬಲ್ ಪ್ರದೇಶ, ಲೈನ್‍ಮನೆಗಳು ಹಾಗೂ ಜನದಟ್ಟಣೆ ಪ್ರದೇಶಗಳಿಗೆ ತೆರಳಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಬೇಕು ಎಂದು ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಅವರು ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು 5,66,397 ಜನಸಂಖ್ಯೆ ಇದ್ದು, ಇವರಲ್ಲಿ 57,424 ನಗರ/ ಪಟ್ಟಣ ಪ್ರದೇಶದಲ್ಲಿ ಮತ್ತು 5,08,973 ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಇದೆ. ಇವರಲ್ಲಿ 5 ವರ್ಷದೊಳಗಿನ 39,319 ಮಕ್ಕಳು ಜಿಲ್ಲೆಯಲ್ಲಿದ್ದು, 4,602 ನಗರ ಮತ್ತು 34,717 ಗ್ರಾಮೀಣ ಪ್ರದೇಶದ ಮಕ್ಕಳಿದ್ದಾರೆ. ಜಿಲ್ಲೆಯಲ್ಲಿ 1,99,212 ವಲಸಿಗ ಜನಸಂಖ್ಯೆ ಇದ್ದು, ಇವರಲ್ಲಿ 39,319 ಐದು ವರ್ಷದೊಳಗಿನ ಮಕ್ಕಳು ಇದ್ದಾರೆ, ಒಟ್ಟಾರೆ ಜಿಲ್ಲೆಯಲ್ಲಿ 1,33,356 ಕುಟುಂಬಗಳಿವೆ ಎಂದು ಅವರು ಮಾಹಿತಿ ನೀಡಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಒಟ್ಟು 465 ಬೂತ್‍ಗಳನ್ನು ತೆರೆಯಲಾಗಿದೆ. ಅಲ್ಲದೆ 20 ಟ್ರಾನ್ಸಿಸ್ಟ್ ತಂಡಗಳು, 6 ಸಂಚಾರಿ ಲಸಿಕಾ ತಂಡಗಳನ್ನು ವ್ಯವಸ್ಥೆ ಮಾಡಲಾಗಿದೆ. 1,950 ಮಂದಿ ಲಸಿಕೆ ಹಾಕುವವರು, 87 ಮಂದಿ ಮೇಲ್ವಿಚಾರಕರು, 966 ಮನೆ ಮನೆಗೆ ಭೇಟಿ ನೀಡುವ ತಂಡವನ್ನು ರಚಿಸಲಾಗಿದೆ ಎಂದು ಡಾ.ರಾಜೇಶ್ ಮಾಹಿತಿ ನೀಡಿದರು.

ಪಲ್ಸ್ ಪೋಲಿಯೋವನ್ನು ಕಡ್ಡಾಯವಾಗಿ 5 ವರ್ಷದೊಳಗಿನ ಮಕ್ಕಳಿಗೆ ಹಾಕಿಸಬೇಕಿದೆ. ಪೋಲಿಯೋ ರೋಗವು ರಾಷ್ಟ್ರದಲ್ಲಿ ನಿರ್ಮೂಲನೆ ಯಾಗಿದ್ದರೂ ಸಹ ಪಕ್ಕದ ದೇಶಗಳಲ್ಲಿ ಇನ್ನೂ ಇರುವದರಿಂದ, ಈ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕಿದೆ ಎಂದರು.

ಪಲ್ಸ್ ಪೋಲಿಯೋ ನಿರ್ಮೂಲನೆ ಸಂಬಂಧಿಸಿದಂತೆ ಇದುವರೆಗೆ ಆಗಿರುವ ಪ್ರಯತ್ನಗಳು, ವಿಶ್ವದಲ್ಲಿ ಪಲ್ಸ್ ಪೋಲಿಯೋ ಪರಿಸ್ಥಿತಿ, ದೇಶದಲ್ಲಿ ಪೋಲಿಯೋ ನಿರ್ಮೂಲನೆ ಹಾಗೂ ನೆರೆ ರಾಷ್ಟ್ರಗಳಲ್ಲಿ ಪಲ್ಸ್ ಪೋಲಿಯೋ ಸ್ಥಿತಿಗತಿ ಬಗ್ಗೆ ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಮಾಹಿತಿ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿಗಳಾದ ಡಾ.ಶಿವಕುಮಾರ್, ಡಾ.ಆನಂದ್, ವೈದ್ಯಕೀಯ ಕಾಲೇಜಿನ ಡಾ.ರಾಮಚಂದ್ರ ಕಾಮತ್, ಜಿ.ಪಂ.ಸಹಾಯಕ ಕಾರ್ಯದರ್ಶಿ ಬಾಬು, ಪೌರಾಯುಕ್ತರಾದ ಎಂ.ಎಲ್.ರಮೇಶ್, ತಾಲೂಕು ವೈದ್ಯಾಧಿಕಾರಿಗಳಾದ ಡಾ.ಯತಿರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ದಿವಾಕರ ಮತ್ತಿತರರು ಇದ್ದರು.