ಸೋಮವಾರಪೇಟೆ, ಜ. 14: ಸೋಮವಾರಪೇಟೆ ಪಟ್ಟಣದಲ್ಲಿ ಪಾರ್ಕಿಂಗ್ ಸಮಸ್ಯೆಯನ್ನು ಬಗೆಹರಿಸುವಂತೆ ಕಾಫಿ ಬೆಳೆಗಾರರ ಸಂಘದ ವತಿಯಿಂದ ಪ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಸಂತೆ ದಿನವಾದ ಸೋಮವಾರದಂದು ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಆಗಮಿಸುವ ರೈತರು ತಮ್ಮ ವಾಹನಗಳನ್ನು ನಿಲುಗಡೆಗೊಳಿಸಲು ಅಸಾಧ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಸಿ.ಕೆ. ಸುಬ್ಬಯ್ಯ ರಸ್ತೆಯ ಒಂದು ಬದಿಯಲ್ಲಿ ಚಿಲ್ಲರೆ ವ್ಯಾಪಾರಸ್ಥರು ವ್ಯಾಪಾರದಲ್ಲಿ ತೊಡಗಿದ್ದರೆ, ಮತ್ತೊಂದು ಕಡೆ ಆಟೋಗಳು ನಿಲುಗಡೆಯಾಗುವದರಿಂದ ಇತರ ವಾಹನಗಳ ಸಂಚಾರಕ್ಕೆ ತೊಡಕಾಗಿದೆ ಎಂದು ಸಂಘದ ಅಧ್ಯಕ್ಷ ಮೋಹನ್ ಬೋಪಣ್ಣ ಗಮನ ಸೆಳೆದರು.
ಇದರೊಂದಿಗೆ ಸಂತೆ ದಿನ ಕೆಲ ಅಂಗಡಿಗಳ ಮಾಲೀಕರು ತಮ್ಮ ಅಂಗಡಿಯ ಎದುರು ದ್ವಿಚಕ್ರ ವಾಹನವನ್ನು ನಿಲ್ಲಿಸುತ್ತಿದ್ದು, 4 ಚಕ್ರದ ವಾಹನಗಳ ನಿಲುಗಡೆಗೆ ಅವಕಾಶ ನೀಡುತ್ತಿಲ್ಲ. ಕ್ಲಬ್ ರಸ್ತೆಯಲ್ಲಿ 4 ಚಕ್ರದ ವಾಹನಗಳ ನಿಲುಗಡೆಯ ಜಾಗದಲ್ಲಿ ದ್ವಿಚಕ್ರ ವಾಹನವನ್ನು ನಿಲ್ಲಿಸಲಾಗುತ್ತಿದೆ. ಇದರಿಂದಾಗಿ ರೈತರು ತಾವು ಬೆಳೆದ ಬೆಳೆಗಳನ್ನು ಪಟ್ಟಣಕ್ಕೆ ತರಲು ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಸುಲಲಿತ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.