ಮಡಿಕೇರಿ, ಜ. 16: ಮುಂಬರುವ ನಗರಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳನ್ನು ಗುರುತಿಸಿ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಲಿದ್ದು, ಭಿನ್ನಾಭಿಪ್ರಾಯ ಗಳನ್ನು ಮರೆತು ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬ ಕಾರ್ಯಕರ್ತನೂ ಶ್ರಮಿಸ ಬೇಕೆಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಕಾರ್ಯಕರ್ತರಿಗೆ ಕರೆ ನೀಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಗರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೂಲಕ ಸ್ಪರ್ಧಿಸುವ ಆಕಾಂಕ್ಷಿಗಳು ದೊಡ್ಡ ಸಂಖ್ಯೆಯಲ್ಲೇ ಇದ್ದಾರೆ. ಆದರೆ ಅಧಿಕಾರಕ್ಕೆ ಬರುವ ದೃಷ್ಟಿಯಿಂದ ಪಕ್ಷ ಸೂಚಿಸುವ ಅಭ್ಯರ್ಥಿಗಳನ್ನು ಗೆಲ್ಲಿಸಲು ಕಾರ್ಯಕರ್ತರು ಶ್ರಮ ಪಡಬೇಕೆಂದು ಕರೆ ನೀಡಿದರು.
ಅಭ್ಯರ್ಥಿಗಳ ಆಯ್ಕೆ ಸಂದರ್ಭ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಮೂಡಿದರೂ ಪಕ್ಷದ ಹಿತ ದೃಷ್ಟಿಯಿಂದ ಮತ್ತು ಅಧಿಕಾರ ಹಿಡಿಯಲೇ ಬೇಕೆನ್ನುವ ಛಲದೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದು ವೀಣಾಅಚ್ಚಯ್ಯ ಸಲಹೆ ನೀಡಿದರು.
ಮಾಜಿ ಸಚಿವ ಎಂ.ಸಿ. ನಾಣಯ್ಯ ಮಾತನಾಡಿ, ಪಕ್ಷದಲ್ಲಿ ಯಾವದೇ ರೀತಿಯ ಭಿನ್ನಾಭಿಪ್ರಾಯಗಳಿಗೆ ಎಡೆ ಮಾಡಿಕೊಡದೆ, ಯಾರ ಅನುಯಾಯಿಗಳು ಎನ್ನುವದನ್ನು ನೋಡದೆ ತಮ್ಮ ಕ್ಷೇತ್ರಗಳಲ್ಲಿ ಒಳ್ಳೆಯ ಹೆಸರುಗಳಿಸಿರುವ ಅಭ್ಯರ್ಥಿಗಳಿಗೆ ಟಿಕೆಟ್ ಸಿಗಲಿದೆ ಎಂದರು.
ಕೆ.ಪಿ.ಸಿ.ಸಿ. ಸದಸ್ಯ ಟಿ.ಪಿ. ರಮೇಶ್ ಮಾತನಾಡಿ, ಎಲ್ಲಾ ವಾರ್ಡ್‍ಗಳಲ್ಲಿ ಉತ್ತಮ ಅಭ್ಯರ್ಥಿಗಳನ್ನು ಕೋರ್ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವದು ಎಂದರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ನಗರಸಭೆಯ 23 ವಾರ್ಡ್‍ಗಳ ಎಲ್ಲಾ ಅಭ್ಯರ್ಥಿಗಳ ಪಟ್ಟಿ ತಯಾರಾಗಿದ್ದು, ಇದನ್ನು ಕೋರ್ ಸಮಿತಿಯ ಮುಂದಿಡಲಾಗಿದೆ. ಹೈಕಮಾಂಡ್ ಈ ಪಟ್ಟಿಯನ್ನು ಶೀಘ್ರ ಅಂತಿಮಗೊಳಿಸಲಿದೆ ಎಂದರು.
ಮಡಿಕೇರಿ ನಗರಾಧ್ಯಕ್ಷ ಕೆ.ಯು. ಅಬ್ದುಲ್ ರಜಾóಕ್ ಮಾತನಾಡಿ, ನಗರಸಭೆ ಚುನಾವಣೆಗೆ ಸೂಕ್ತ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದರು. ಕೆ.ಪಿ.ಸಿ.ಸಿ. ಅಲ್ಪಸಂಖ್ಯಾತರ ಘಟಕದ ಸದಸ್ಯ ಎಂ.ಎ. ಉಸ್ಮಾನ್, ರಾಜ್ಯ ಅಲ್ಪಸಂಖ್ಯಾತರ ಘಟಕದ ಸಂಯೋಜಕಿ ಸುರಯ್ಯ ಅಬ್ರಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ನಗರಸಭಾ ಸದಸ್ಯರು ಮತ್ತು ನಾಮ ನಿರ್ದೇಶಿತ ಸದಸ್ಯರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ಸಭೆಯಲ್ಲಿ ಹಾಜರಿದ್ದರು.
ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ. ಚಂದ್ರಶೇಖರ್ ಸ್ವಾಗತಿಸಿ, ನಗರಾಧ್ಯಕ್ಷ ಅಬ್ದುಲ್ ರಜಾóಕ್ ವಂದಿಸಿದರು.
ಕಾಂಗ್ರೆಸ್‍ಗೆ ಸೇರ್ಪಡೆ
ಮಡಿಕೇರಿ ನಗರ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸ್ಥಾನ ಮತ್ತು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಮಿನಾಝ್ ಪ್ರವೀಣ್ ಇದೇ ಸಂದರ್ಭ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.