ಮಡಿಕೇರಿ, ಜ.17 : ಶಿರಂಗಾಲ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ, ಗುರುವಂದನಾ ಮತ್ತು ವಾರ್ಷಿಕೋತ್ಸವ ಸಮಾರಂಭ ತಾ.20 ಹಾಗೂ 21 ರಂದು ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ಅವರು, 1993ರಲ್ಲಿ ಶಿರಂಗಾಲ ಸರ್ಕಾರಿ ಪದವಿ ಪೂರ್ವಕಾಲೇಜು ಆರಂಭಗೊಂಡಿದ್ದು, ಪ್ರಸಕ್ತ ರಜತ ಮಹೋತ್ಸವದ ಅಂಗವಾಗಿ ಸುಮಾರು 16 ಲಕ್ಷ ರೂ. ವೆಚ್ಚದಲ್ಲಿ ಕ್ರೀಡಾಂಗಣದ ಗ್ಯಾಲರಿ, 3.50 ಲಕ್ಷ ವೆಚ್ಚದಲ್ಲಿ ಶಾರದಾ ಮಂದಿರವನ್ನು ದಾನಿಗಳ ನೆರವಿನಿಂದ ಮತ್ತು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಅನುದಾನದಲ್ಲಿ 3 ಲಕ್ಷ ರೂ. ವೆಚ್ಚದಲ್ಲಿ ಮುಖ್ಯ ದ್ವಾರವನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.

ತಾ.20 ರಂದು ಬೆಳಿಗ್ಗೆ 8 ಗಂಟೆಗೆ ಶಾರದಾ ಮಂದಿರದ ಉದ್ಘಾಟನೆ ನಡೆಯಲಿದ್ದು, ಈ ಸಂದರ್ಭ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಅವರು ಶಾರದಾ ಮೂರ್ತಿಯ ಪ್ರತಿಷ್ಠಾಪನೆ ನೆರವೇರಿಸಲಿದ್ದಾರೆ. 10.30 ಗಂಟೆಗೆ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರು ಕಾಲೇಜಿನ ನೂತನ ಕೊಠಡಿ, ಸಂಸದ ಪ್ರತಾಪ್ ಸಿಂಹ ಅವರು ಕ್ರೀಡಾಂಗಣದ ಗ್ಯಾಲರಿ. ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರು ಬೆಳ್ಳಿ ಭವನದ ಹೆಚ್ಚುವರಿ ಕೊಠಡಿ ಹಾಗೂ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಹಾಗೂ ಭೋಜೇಗೌಡ ಅವರುಗಳು ಪ್ರತಿಭಾ ಪುರಸ್ಕಾರ ನೆರವೇರಿಸಲಿದ್ದು, ವಿಧಾನ ಪರಿಷತ್ ಸದಸ್ಯ ಅಯನೂರು ಮಂಜುನಾಥ್, ಜಿಪಂ ಸದಸ್ಯ ಹೆಚ್.ಎಸ್. ಶ್ರೀನಿವಾಸ್, ತಾಪಂ ಅಧ್ಯಕ್ಷೆ ಪುಷ್ಪಾ ರಾಜೇಶ್ ಮತ್ತಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಅಪರಾಹ್ನ 1.30 ರಿಂದ ಬಿ.ಎಸ್. ಲೋಕೇಶ್ ಸಾಗರ್ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದ್ದು, ಅಪರಾಹ್ನ 2.30ಕ್ಕೆ ನಡೆಯುವ ಗುರುವಂದನಾ ಕಾರ್ಯಕ್ರಮದಲ್ಲಿ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ತೊರೆನೂರು ಮಠದ ಶ್ರೀ ಮಲ್ಲೇಶ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ.ಜಿಲ್ಲಾಧಿಕಾರಿ ಮತ್ತು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಿಯ, ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್, ಶಿರಂಗಾಲ ದೇವತಾ ಸಮಿತಿ ಮಾಜಿ ಅಧ್ಯಕ್ಷ ಎಸ್.ಹೆಚ್.ರಾಜಪ್ಪ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಈ ಸಂದರ್ಭ 1993 ರಿಂದ 2018ರವರೆಗೆ ಕಾರ್ಯ ನಿರ್ವಹಿಸಿದ ಖಾಯಂ ಪ್ರಾಂಶುಪಾಲರು, ಉಪನ್ಯಾಸಕರು, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಪ್ರೌಢಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಲಾಗುತ್ತದೆ ಎಂದರು.

ತಾ.21 ರ ಪೂರ್ವಾಹ್ನ 10.30ಕ್ಕೆ 2018-19 ನೇ ಸಾಲಿನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ಹಾಗೂ ಆದರ್ಶ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮವನ್ನು ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ ಉದ್ಘಾಟಿಸಲಿದ್ದಾರೆ. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎನ್.ಬಿ. ಮಹೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಮಾಜಿ ಸಚಿವ ಬಿ.ಎ. ಜೀವಿಜಯ ಬಹುಮಾನ ವಿತರಿಸಲಿದ್ದು, ಚಿಕ್ಕಅಂಕನಹಳ್ಳಿ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಡಾ. ದೊಡ್ಡೇಗೌಡ ಸಮಾರೋಪ ಭಾಷಣ ಮಾಡಲಿದ್ದಾರೆ. ಅಪರಾಹ್ನ 2.30 ರಿಂದ ಕಾಲೇಜು ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಸಿರಿ ಕಾರ್ಯಕ್ರಮ ನಡೆಯಲಿದೆಯೆಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಜತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಎಂ.ಎಸ್. ರಮೇಶ್, ಮಂಟಿಗಮ್ಮ ದೇವತಾ ಸಮತಿ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ಕಾರ್ಯದರ್ಶಿ ಸಿ.ಎನ್. ಲೋಕೇಶ್, ಸದಸ್ಯ ಎಸ್.ಎಸ್. ಕೃಷ್ಣ ಉಪಸ್ಥಿತರಿದ್ದರು.