ಸೋಮವಾರಪೇಟೆ, ಜ. 24: ಸಮೀಪದ ಕಿರಗಂದೂರು ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ತಾ. 26ರಂದು ನಡೆಯಲಿದೆ ಎಂದು ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಪಿ.ಬಿ. ಪೊನ್ನಪ್ಪ ತಿಳಿಸಿದ್ದಾರೆ.

ಕಳೆದ 1927ರಲ್ಲಿ ಪ್ರಾರಂಭವಾದ ಕಿರಗಂದೂರು ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿದ್ದು, ಅವರೆಲ್ಲರನ್ನೂ ಒಂದುಗೂಡಿಸಿ ಶಾಲೆಗೆ ಹೆಚ್ಚಿನ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿಗಳ ನೋಂದಣಿ ಕಾರ್ಯ ಹಮ್ಮಿಕೊಳ್ಳಲಾಗಿದೆ. ತಾ. 26ರಂದು ಶಾಲಾ ಆವರಣದಲ್ಲಿ ನಡೆಯುವ ಸಮ್ಮಿಲನ ಕಾರ್ಯಕ್ರಮದಲ್ಲಿ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಮ್ಮಿಲನ ಕಾರ್ಯಕ್ರಮದ ಅಂಗವಾಗಿ ಗ್ರಾ.ಪಂ. ವ್ಯಾಪ್ತಿಯ ಸಾರ್ವಜನಿಕರಿಗೆ, ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದ ಅವರು, ಈ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಪ್ರಾರಂಭ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಮೂಲಭೂತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಪಡಿಸಲಾಗುವದು ಎಂದು ಪೊನ್ನಪ್ಪ ತಿಳಿಸಿದ್ದಾರೆ.