ಮಡಿಕೇರಿ, ಫೆ. 3: ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ರೀತಿಯಲ್ಲಿ ಜಿಲ್ಲೆಯಲ್ಲಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಪ್ರಚೋದನಕಾರಿಯಾದ ಮಾತನ್ನಾಡಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಜಿಲ್ಲಾ ಕಾಂಗ್ರೆಸ್ ಆಗ್ರಹಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುಕ್ಕಾಟಿರ ಶಿವು ಮಾದಪ್ಪ ಅವರು ಅನಂತ್‍ಕುಮಾರ್ ಅವರು ಸಂವಿಧಾನದ ಆಶಯ, ನೀತಿ-ನಿಯಮಗಳನ್ನು ಧಿಕ್ಕರಿಸಿ ಹೇಳಿಕೆ ನೀಡುತ್ತಿದ್ದಾರೆ. ಅವರು ಈ ಹಿಂದಿನಿಂದಲೂ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು, ಸಮಾಜದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದು ಅಂತರರಾಷ್ಟ್ರೀಯ ಮಟ್ಟದಲ್ಲೂ ದೇಶದ ಗೌರವಕ್ಕೆ ಧಕ್ಕೆಯಾಗುವಂತಗಿದ್ದು, ಇವರನ್ನು ಸಚಿವ ಸಂಪುಟದಿಂದ ಕೈಬಿಡುವದರೊಂದಿಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.