ಮಡಿಕೇರಿ, ಫೆ. 15: ಮತದಾರರ ಪಟ್ಟಿಯಲ್ಲಿ ಯುವ ಮತದಾರರ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ಕ್ಯಾಂಪಸ್ ರಾಯಭಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಯೋಗೇಶ್ ಸಲಹೆ ಮಾಡಿದ್ದಾರೆ.
ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ವತಿಯಿಂದ ಕ್ಯಾಂಪಸ್ ರಾಯಭಾರಿಗಳಿಗೆ ನಡೆದ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
1.1.2019 ಕ್ಕೆ 18 ವರ್ಷ ಪೂರ್ಣಗೊಂಡವರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಪ್ರತಿ ಕಾಲೇಜಿನಿಂದ ಕ್ಯಾಂಪಸ್ ರಾಯಭಾರಿಗಳನ್ನು ನಿಯೋಜಿಸಿ, 18 ವರ್ಷ ಪೂರ್ಣಗೊಂಡ ಯುವ ಜನರು ಮತದಾರರ ಪಟ್ಟಿಯಲ್ಲಿ ಹೆಸರು ಇರಬೇಕು ಎಂಬ ಉದ್ದೇಶದಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ತಮ್ಮ ತಮ್ಮ ಕಾಲೇಜು ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಸಹಕರಿಸುವಂತೆ ಮನವಿ ಮಾಡಿದರು.
ಆನ್ಲೈನ್ ಮೂಲಕವೂ ಸಹ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಮಾಹಿತಿ ನೀಡುವಂತಾಗಬೇಕು. ವಿಕಲಚೇತನ ಮತದಾರರನ್ನು ಮತಗಟ್ಟೆಗೆ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡುವದು, ಮತಗಟ್ಟೆ ಅಧಿಕಾರಿಗಳ ಜೊತೆ ಸಮನ್ವಯತೆ ಸಾಧಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಹೆಚ್ಚಳವಾಗಲು ಮತದಾರರಲ್ಲಿ ಜಾಗೃತಿ ಮೂಡಿಸುವಂತಾಗಬೇಕು. ಜಿಲ್ಲೆಯಲ್ಲಿ ಶಾಂತಿಯುತವಾಗಿ ಮತ್ತು ವ್ಯವಸ್ಥಿತವಾಗಿ ಚುನಾವಣೆ ನಡೆಸಲು ಸಹಕರಿಸುವಂತೆ ಕೋರಿದರು.
ಜಿ.ಪಂ. ಉಪ ಕಾರ್ಯದರ್ಶಿ ಗುಡೂರು ಭೀಮಸೇನ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಮತದಾನ ಅತ್ಯಂತ ಮಹತ್ವದ್ದಾಗಿದೆ. ಕ್ಯಾಂಪಸ್ ರಾಯಭಾರಿಗಳು ಯುವ ಮತದಾರರ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡುವದರ ಜೊತೆಗೆ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವಂತಾಗಬೇಕು ಎಂದು ಅವರು ಹೇಳಿದರು.
ಭಾಗಮಂಡಲ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ತರಬೇತುದಾರ ಕೆ.ಜೆ. ದಿವಾಕರ ಅವರು ಮಾಹಿತಿ ನೀಡಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡುವಂತಾಗಲು ನಮೂನೆ 6 ನ್ನು ಭರ್ತಿ ಮಾಡಿ ನೀಡಬೇಕು. ನಮೂನೆ 7 ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವದು, ನಮೂನೆ 8 ರಲ್ಲಿ ಸರಿಪಡಿಸುವ ಕಾರ್ಯ ಮಾಡಬೇಕು. ಈ ಬಗ್ಗೆ ತಮ್ಮ ಕಾಲೇಜುಗಳಲ್ಲಿ ಮಾಹಿತಿ ನೀಡುವಂತೆ ಅವರು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ಇರುವವರು ಕಡ್ಡಾಯವಾಗಿ ಮತದಾನ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರೇರಣೆ ನೀಡಬೇಕು. ಚುನಾವಣಾ ಸಾಕ್ಷರತೆ ಪಡೆದುಕೊಳ್ಳಬೇಕು. ಮತದಾನದ ಶಿಕ್ಷಣ ಮತ್ತು ಸಹಭಾಗಿತ್ದದಲ್ಲಿ ಕೈಜೋಡಿಸುವಂತಾಗಬೇಕು ಎಂದು ಕೋರಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ, ಪೌರಾಯುಕ್ತ ಎಂ.ಎಲ್. ರಮೇಶ್, ಪ.ಪಂ. ಮುಖ್ಯಾಧಿಕಾರಿಗಳಾದ ಶ್ರೀಧರ ಇತರರು ಇದ್ದರು.