ಮಡಿಕೇರಿ, ಫೆ. 19: ಕರ್ನಾಟಕ ಲೋಕಸೇವಾ ಆಯೋಗ, ಬೆಂಗಳೂರು ಇವರು ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ದರ್ಜೆ ಸಹಾಯಕರ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಯಾವದೇ ಪದವಿಯಲ್ಲಿ ತೇರ್ಗಡೆ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಪಿ.ಯು.ಸಿ. ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ 12.3.2019ಕ್ಕೆ ಅನ್ವಯವಾಗುವಂತೆ ಕನಿಷ್ಟ 18 ರಿಂದ 35 ವರ್ಷಗಳು ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲರು, ವಿಧವೆಯರು ಹಾಗೂ ಮಾಜಿ ಸೈನಿಕರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸಲು ಮಾರ್ಚ್ 12 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600, ಪ್ರವರ್ಗ-2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300, ಮಾಜಿ ಸೈನಿಕರಿಗೆ ರೂ. 50, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ವಿಕಲಚೇತನರು/ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಅಥವಾ ಕಾಮನ್ ಸರ್ವಿಸ್ ಸೆಂಟರ್‍ನಲ್ಲಿ ಮಾರ್ಚ್ 13 ರೊಳಗೆ ಪಾವತಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವೆಬ್‍ಸೈಟ್: hಣಣಠಿ://ಞಠಿsಛಿ/ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.