ಕುಶಾಲನಗರ, ಫೆ. 20: ಅಪರೂಪದ ಸಸ್ಯ ಮತ್ತು ಜೀವಿಗಳನ್ನು ಒಳಗೊಂಡ ಅರಣ್ಯ ಹಾಗೂ ಜೀವ ವೈವಿಧ್ಯ ಸಂಪತ್ತನ್ನು ಹೊಂದಿರುವ ಪಶ್ಚಿಮಘಟ್ಟ ಸಂರಕ್ಷಣೆಗೆ ನಾವು ಹೆಚ್ಚಿನ ಒತ್ತು ವಹಿಸದಿದ್ದಲ್ಲಿ ಇಡೀ ಜೀವ ಸಂಕುಲವೇ ನಾಶವಾಗುವ ಅಪಾಯವಿದೆ ಎಂದು ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಸಮೀಪದ ಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಮತ್ತು ವೈಜ್ಞಾನಿಕ ಮನೋಭಾವಕ್ಕಾಗಿ ಯುವಜನತೆ ಎಂಬ ಕೇಂದ್ರ ವಿಷಯದಡಿ ಉಪನ್ಯಾಸ ನೀಡಿದ ಅವರು, ಪಶ್ಚಿಮಘಟ್ಟ ಸಂರಕ್ಷಣೆ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಭವಿಷ್ಯತ್ತಿನಲ್ಲಿ ತೀವ್ರ ಗಂಡಾಂತರ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದರು.
ನದಿ, ಕೆರೆ ಹಾಗೂ ಜಲಮೂಲಗಳು ಸೇರಿದಂತೆ ಅಂತರ್ಜಲ ಸಂರಕ್ಷಣೆಗೆ ನಾವು ಹೆಚ್ಚಿನ ಜಾಗೃತಿ ವಹಿಸಬೇಕಿದೆ. ಹಾಗೆಯೇ ನಾವು ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.
ಮನುಷ್ಯನ ದಿನನಿತ್ಯದ ಚಟುವಟಿಕೆಗಳಲ್ಲಿ ಹಾಸುಹೊಕ್ಕಾಗಿರುವ ಪ್ಲಾಸ್ಟಿಕ್ ಬಳಕೆಗೆ ಪರ್ಯಾಯವಾಗಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಕೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕಿದೆ ಎಂದು ಪ್ರೇಮಕುಮಾರ್ ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪನ್ಯಾಸಕ ಪ್ರಕಾಶ್ ಕುಂಬಾರ್ ಮಾತನಾಡಿ, ಪರಿಸರ ಸಂರಕ್ಷಣೆಯು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಈ ದಿಸೆಯಲ್ಲಿ ಯುವಜನತೆ ಹೆಚ್ಚಿನ ಕಾಳಜಿ ವಹಿಸಿ ಜನರಲ್ಲಿ ಪರಿಸರ ಜಾಗೃತಿ ಮೂಡಿಸಬೇಕು ಎಂದರು.
ತಾಲೂಕು ಬಿ.ಸಿ.ಎಂ. ವಿಸ್ತರಣಾಧಿಕಾರಿ ಶ್ರೀಕಾಂತ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಹೇಗೆ ತಯಾರು ನಡೆಸಬೇಕು ಎಂಬ ಕುರಿತು ಮಾಹಿತಿ ಒದಗಿಸಿದರು. ಪರಿಸರ ಸಂರಕ್ಷಣೆಯಲ್ಲಿ ಯುವಕರ ಪಾತ್ರ ಕುರಿತು ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಇ. ಮೊಹಿದ್ದೀನ್ ಮಾತನಾಡಿದರು.
ಎನ್.ಎಸ್.ಎಸ್. ಕಾರ್ಯಕ್ರಮ ಅಧಿಕಾರಿಗಳಾದ ಎ. ಅಸ್ಮತ್, ಹೆಚ್.ಜೆ. ಮಂಜುನಾಥ್, ಸಹ ಶಿಬಿರಾಧಿಕಾರಿ ಯುವರಾಜ್ ರಾವ್, ಶಾಲಾ ಮುಖ್ಯ ಶಿಕ್ಷಕ ಎಂ.ಸಿ. ವೆಂಕಟೇಶ್, ಶಿಕ್ಷಕ ಜಂಷೀದ್ ಅಹ್ಮದ್ ಖಾನ್ ಇದ್ದರು. ಶಿಬಿರಾರ್ಥಿಗಳು ಎನ್.ಎಸ್.ಎಸ್. ಗೀತೆ ಹಾಡಿದರು. ನಂತರ ವಿದ್ಯಾರ್ಥಿಗಳಿಗೆ ಟಿ.ಜಿ. ಪ್ರೇಮ ಕುಮಾರ್ ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.