ಸೋಮವಾರಪೇಟೆ, ಫೆ. 21: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ವರ್ಷಾಚರಣೆಯ ಅಂಗವಾಗಿ ಪಟ್ಟಣ ಪಂಚಾಯಿತಿ ಹಾಗೂ ನೇರುಗಳಲೆ ಗ್ರಾಮ ಪಂಚಾಯಿತಿಗಳ ಸಹಯೋಗದೊಂದಿಗೆ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಸಂಘದ ಅಬ್ಬೂರುಕಟ್ಟೆ ಶಾಖೆಯ ಆವರಣದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಗಿಡಕ್ಕೆ ನೀರುಣಿಸುವ ಮೂಲಕ ಸೋಮವಾರಪೇಟೆ ಜೈಜವಾನ್ ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜಿ. ಬಸಪ್ಪ ಹಾಗೂ ಕೃಷಿಕ ಕೆ.ಟಿ. ಪರಮೇಶ್ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಬಿ.ಡಿ. ಮಂಜುನಾಥ್ ವಹಿಸಿದ್ದರು. ಸಂಘದ ಶತಮಾನೋತ್ಸವ ವರ್ಷಾಚರಣೆಯ ಅಂಗವಾಗಿ ಸಂಘದ ಕಾರ್ಯಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ವರ್ಷಪೂರ್ತಿ ಆಚರಿಸಲಾಗುವದು ಎಂದು ಅವರು ತಿಳಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಕಾಶ್ಮೀರದಲ್ಲಿ ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕೃಷಿಯಲ್ಲಿ ಸಾಧನೆ ಮಾಡಿದ ಕೆ.ಟಿ. ಪರಮೇಶ್ ಅವರನ್ನು ಸನ್ಮಾನಿಸಲಾಯಿತು. ರಸ್ತೆಯ ಇಕ್ಕೆಲಗಳಲ್ಲಿನ ಕಸಗಳನ್ನು ಹೆಕ್ಕಿ ಸಂಗ್ರಹಿಸುವ ಮೂಲಕ ಅಬ್ಬೂರುಕಟ್ಟೆಯಿಂದ ಹೊರಟ ಸ್ವಚ್ಛತಾ ಕಾರ್ಯವು ಸೋಮವಾರಪೇಟೆ ತಲಪಿ ಪಟ್ಟಣದ ಪ್ರಮುಖ ಬೀದಿಗಳನ್ನು ಸ್ವಚ್ಛಗೊಳಿಸಲಾಯಿತು.
ಸ್ವಚ್ಛತಾ ಕಾರ್ಯದಲ್ಲಿ ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ತಿಮ್ಮಯ್ಯ ಹಾಗೂ ಸದಸ್ಯರುಗಳು, ಜೈಜವಾನ್ ಮಾಜಿ ಸೈನಿಕರ ಸಂಘದ ಸದಸ್ಯರುಗಳು, ಪ್ರಾ.ಕೃ.ಪ.ಸ. ಸಂಘದ ಉಪಾಧ್ಯಕ್ಷ ಕೆ.ಜಿ. ಸುರೇಶ್ ಹಾಗೂ ನಿರ್ದೇಶಕರುಗಳು, ಸಂಘದ ಮುಖ್ಯ ಕಾರ್ಯನಿರ್ವ ಹಣಾಧಿಕಾಗಿ ರವೀಂದ್ರ ಸೇರಿದಂತೆ ಸಿಬ್ಬಂದಿ ಹಾಗೂ ಸದಸ್ಯರು ಪಾಲ್ಗೊಂಡಿದ್ದರು.
ಸ್ವಚ್ಛತಾ ಕಾರ್ಯದಲ್ಲಿ ಅರೆಯೂರಿನ ಯಶ್ವಂತ್ ಟ್ರ್ಯಾಕ್ಟರನ್ನು ಉಚಿತವಾಗಿ ನೀಡಿದ್ದರು.