ಮಡಿಕೇರಿ, ಫೆ. 23: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನಲ್ಲಿ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಪದವಿ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ಆಯೋಜಿಸಿದೆ.
ಈ ಸ್ಪರ್ಧೆಯು ಯುವಕರಲ್ಲಿ ಸೃಜನಶೀಲತೆ, ಕೌಶಲ್ಯ, ಕ್ರಿಯಾಶೀಲತೆಯನ್ನು ವ್ಯಕ್ತಪಡಿಸಲು ಹಾಗೂ ವೈಜ್ಞಾನಿಕ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸುವ ಉತ್ತಮ ವೇದಿಕೆಯಾಗಿದೆ. ವಿಜ್ಞಾನದ ತತ್ವಗಳನ್ನು ಬೆಳೆಸಿಕೊಂಡು ಜನಸಾಮಾನ್ಯರಿಗೆ ಉಪಯುಕ್ತವಾದ ತಂತ್ರಜ್ಞಾನ ಅಭಿವೃದ್ಧಿಪಡಿಸುವಂತೆ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಈ ಸ್ಪರ್ಧೆಯನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದೆ.
ಮೊದಲನೇ ಹಂತದಲ್ಲಿ ಆಯ್ದ 6 ಶೈಕ್ಷಣಿಕ ವಿಭಾಗಗಳಲ್ಲಿ ವಿಭಾಗ ಮಟ್ಟದ ಸ್ಪರ್ಧೆಯನ್ನು ಮತ್ತು ಎರಡನೆಯ ಹಂತದಲ್ಲಿ ರಾಜ್ಯ ಮಟ್ಟದಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಈ ಸ್ಪರ್ಧೆ ಪ್ರಯುಕ್ತ “ಮನುಕುಲಕ್ಕಾಗಿ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರ’’ ಕೇಂದ್ರ ವಿಷಯದಡಿ 5 ಉಪ ಶೀರ್ಷಿಕೆಗಳನ್ನು ಒಳಗೊಂಡಂತೆ ವಿದ್ಯಾರ್ಥಿಗಳು ಮಾದರಿಗಳನ್ನು ಸಿದ್ಧಪಡಿಸಿ ಪ್ರದರ್ಶಿಸಲಿದ್ದಾರೆ. ವಿಭಾಗ ಮಟ್ಟದ ಸ್ಪರ್ಧೆಯನ್ನು ಮಾರ್ಚ್ ತಿಂಗಳಿನಲ್ಲಿ, ಹಾಗೂ ರಾಜ್ಯ ಮಟ್ಟದ ಸ್ಪರ್ಧೆಯನ್ನು ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಆಯೋಜಿಸಲಾಗುವದು. ವಿಭಾಗ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸುವ ವಿದ್ಯಾರ್ಥಿಗಳಿಗೆ ಪ್ರತಿ ಉಪ ಶೀರ್ಷಿಕೆಗೆ ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನಗಳನ್ನೂ ಹಾಗೂ ಪ್ರಶಸ್ತಿ ಪತ್ರಗಳನ್ನು ನೀಡಿ ಪುರಸ್ಕರಿಸಲಾಗುವದು. ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರವನ್ನು ನೀಡಲಾಗುವದು. ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಮಾತ್ರ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ.
ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕರಾವಿಪ ಕಚೇರಿಯಿಂದ ಪಡೆಯಬಹುದು ಅಥವಾ ಕರಾವಿಪ ವೆಬ್‍ಸೈಟ್ ತಿತಿತಿ.ಞಡಿvಠಿ.oಡಿg ಮೂಲಕ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಮಾ. 2 ರೊಳಗೆ ಕರಾವಿಪ ಕೇಂದ್ರ ಕಚೇರಿ ವಿಜ್ಞಾನ ಭವನ, ನಂ 24/2, 21 ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ ಬೆಂಗಳೂರು ಇಲ್ಲಿಗೆ ಸಲ್ಲಿಸುವದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-2671839, ಮೊ. 9449530245. 9483549159 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೇವಾಡ ತಿಳಿಸಿದ್ದಾರೆ.