ಮಡಿಕೇರಿ, ಫೆ. 23: ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

ಅವರು ತಾ. 28ರಂದು ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ವಿಶ್ವಾಸನೀಯ ಮೂಲಗಳಿಂದ ಗೊತ್ತಾಗಿದೆ.

ಕೊಡಗಿನ ಸಂತ್ರಸ್ತರ ಮನೆಗಳ ನಿರ್ಮಾಣ ಕಾಮಗಾರಿಯ ಪರಿಶೀಲನೆ ಹಾಗೂ ಇತರ ಅಭಿವೃದ್ಧಿ ಸಂಬಂಧ ಅವರು ಆಗಮಿಸಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಲಿದ್ದಾರೆ.

ಅಲ್ಲದೆ ಅಭಿವೃದ್ಧಿ ಕೆಲಸಗಳ ವೀಕ್ಷಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಮುಖ್ಯಮಂತ್ರಿಗಳ ಪ್ರವಾಸದ ಅರಿವಿದ್ದು, ಇನ್ನಷ್ಟೇ

ನಿರ್ಧಿಷ್ಟ ಕಾರ್ಯಕ್ರಮದ ಮಾಹಿತಿ ಲಭಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಜಾಯ್ ‘ಶಕ್ತಿ’ಗೆ ಸಂಪರ್ಕಿಸಲಾಗಿ ಪ್ರತಿಕ್ರಿಯೆ

ನೀಡಿದ್ದಾರೆ.

ಜಿಲ್ಲಾಧಿಕಾರಿ ಪರಿಶೀಲನೆ

ಕೊಡಗು ಜಿಲ್ಲೆಗೆ ರಾಜ್ಯದ ಮುಖ್ಯಮಂತ್ರಿಗಳು ಭೇಟಿ ನೀಡುವ ಹಿನ್ನೆಲೆಯಲ್ಲಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾರಂಗಿಯಲ್ಲಿರುವ ಹೆಲಿಪ್ಯಾಡ್ ಸ್ಥಳಕ್ಕೆ ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಜವರೇಗೌಡ, ಸೋಮವಾರಪೇಟೆ ತಾಲೂಕು ತಹಶೀಲ್ದಾರ್ ಗೋವಿಂದರಾಜ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಕುಮಾರ್, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕ ಸಚಿನ್, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಶೇಖರ್, ಕಂದಾಯ ನಿರೀಕ್ಷಕ ಮಧುಸೂದನ್, ನೀರಾವರಿ ಇಲಾಖೆಯ ಅಧಿಕಾರಿಗಳು ಇದ್ದರು.