ಮಡಿಕೇರಿ, ಫೆ.27 : ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯು ಮಾರ್ಚ್ 1 ರಿಂದ 18 ರವರೆಗೆ ನಡೆಯಲಿದೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದ್ವಿತೀಯ ಪಿಯು ಮತ್ತು ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ದ್ವಿತೀಯ ಪಿಯು ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸುವದು, ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ತಂಡಗಳ ನಿಯೋಜನೆ ಮತ್ತಿತರ ಕ್ರಮಕ್ಕೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ದ್ವಿತೀಯ ಪಿ.ಯು ಮತ್ತು ಎಸ್‍ಎಸ್‍ಎಲ್‍ಸಿ. ಪರೀಕ್ಷೆ ಯನ್ನು ಪಾರದರ್ಶಕವಾಗಿ ನಡೆಸಬೇಕು. ಪರೀಕ್ಷೆ ಸಂಬಂಧ ಅಗತ್ಯ ವಾಹನಗಳ ನಿಯೋಜನೆ ಮಾಡಬೇಕು. ಸಮಸ್ಯೆಗಳಿದ್ದಲ್ಲಿ ತಕ್ಷಣವೇ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಿ.ಕೆಂಚಪ್ಪ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಒಟ್ಟು 16 ಪರೀಕ್ಷಾ ಕೇಂದ್ರಗಳಿದ್ದು, ಮಡಿಕೇರಿ ತಾಲೂಕಿನಲ್ಲಿ 5, ಸೋಮವಾರಪೇಟೆ ತಾಲೂಕಿನಲ್ಲಿ 6 ಮತ್ತು ವೀರಾಜಪೇಟೆ ತಾಲೂಕಿನ 5 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 5,165 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 2,360 ಬಾಲಕರು ಮತ್ತು 2,805 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ 1281, ವಾಣಿಜ್ಯ 2706, ವಿಜ್ಞಾನ ವಿಭಾಗದಲ್ಲಿ 1178 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಚ್ಚಾಡೋ ಅವರು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯು 27 ಕೇಂದ್ರಗಳಲ್ಲಿ ನಡೆಯಲಿದೆ. ಮಡಿಕೇರಿ ತಾಲೂಕಿನಲ್ಲಿ 8, ವೀರಾಜಪೇಟೆ ತಾಲೂಕಿನಲ್ಲಿ 8 ಮತ್ತು ಸೋಮವಾರಪೇಟೆ ತಾಲೂಕಿನ 11 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 6,893 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಮಡಿಕೇರಿ ತಾಲೂಕಿನಲ್ಲಿ 1956, ವೀರಾಜಪೇಟೆ ತಾಲೂಕಿನಲ್ಲಿ 2,216 ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 2621 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಮಚ್ಚಾಡೊ ಅವರು ಮಾಹಿತಿ ನೀಡಿದರು. ಜಿಲ್ಲಾ ಖಜಾನಾಧಿಕಾರಿ ಸತೀಶ್, ಪ್ರಾದೇಶಿಕ ಸಾರಿಗೆ ಇಲಾಖೆಯ ವ್ಯವಸ್ಥಾಪಕರಾದ ಶಿವಣ್ಣ, ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಇತರರು ಇದ್ದರು.