ಶಿವನು ಮಾಡಿದ 25 ಲೀಲೆಗಳಲ್ಲಿ ಲಿಂಗೋದ್ಭವ ಲೀಲೆಯೇ
ಪ್ರಮುಖವಾದುದು. ಈ ಲೀಲೆ ನಡೆದದ್ದೇ ಮಹಾ ಶಿವರಾತ್ರಿಯ ಪರ್ವಕಾಲದಂದು. ಬ್ರಹ್ಮ-ವಿಷ್ಣು ವಾದವನ್ನು ದೂರ ಮಾಡುವದಕ್ಕಾಗಿ ಮಾಘ ಮಾಸದ ಕೃಷ್ಣ ಪಕ್ಷ ದ ಚತುರ್ದಶಿಯ ಮಹಾನಿಶಿ (ಮಧ್ಯರಾತ್ರಿ) ಆಯ ಪರ್ವ ಕಾಲದಲ್ಲಿ ನಿರ್ಗುಣ ನಿರಾಕಾರನಾದ ಶಿವನು ಅಖಂಡ ಜ್ಯೋತಿರ್ಲಿಂಗದ ರೂಪದಲ್ಲಿ ಪ್ರಕಟವಾದನು. ಇದುವೇ ಮಹಾ ಶಿವರಾತ್ರಿಯ ಪರ್ವ ಕಾಲ ಜಗತ್ತಿನ ಎಲ್ಲ ಶಿವ ಭಕ್ತರು ರಾತ್ರಿಯೆಲ್ಲ ಉಪವಾಸ ವ್ರತವನ್ನಾಚರಿಸಿ ಜಾಗರಣೆಯ ಮೂಲಕ ಶಿವಲಿಂಗವನ್ನು ಪೂಜಿಸುತ್ತಾರೆ. ಇದು ಹಿಂದೂ ಧರ್ಮದ ಅನುಯಾಯಿಗಳ ಬಹು ದೊಡ್ಡ ಹಬ್ಬ.
ಶಿವರಾತ್ರಿ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ. ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.
ಶಿವಪುರಾಣದಲ್ಲಿ ಶಿವರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ. ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.
ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ. ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಫದ ಬಳಿ ಬ್ರಹ್ಮ, ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.
ಶಿವರಾತ್ರಿಯ ದಿನ ರಾತ್ರಿ ಪೂಜೆಯೇ ವಿಶೇಷ. ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿ ಮಾತ್ರ ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸುವ ವಿಶೇಷ ಆಚರಣೆ. ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ. ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸು ಎಂದು ಆ ಶಿವನನ್ನು ಬೇಡುವ ಶುಭ ದಿನವೇ ಶಿವರಾತ್ರಿ. ಅಜ್ಞಾನ ತುಂಬಿರುವಲ್ಲಿ ಶಿವ ಸಂಚರಿಸಿ ಜ್ಞಾನ ದೀವಿಗೆಯನ್ನು ಬೆಳಗುತ್ತಾನೆ ಎಂಬ ನಂಬಿಕೆ ಇದೆ. ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆಯನ್ನು ಅರ್ಪಿಸಿ, ತಿಲಗಿ ಪುಷ್ಪ, ತುಳಸಿಯಿಂದ ಶಿವಲಿಂಗವನ್ನು ಅಲಂಕಾರ ಮಾಡಿ ಶಿವನನ್ನು ಭಜಿಸಿದರೆ, ಪಾಪಗಳು ಪರಿಹಾರವಾಗುತ್ತವೆ, ಮೋಡಗಳೇ ಇಲ್ಲದ ಶುಭ್ರ ಆಕಾಶದಲ್ಲಿ ಬಂದಿರುವ ಚಂದ್ರನ ಬೆಳಕಿನಲ್ಲಿ ಶಿವನಿಗೆ ಅಭಿಷೇಕ ಮಾಡಿ ಆರಾಧಿಸಿದರೆ ಅತ್ಯಂತ ಶ್ರೇಷ್ಠ ಎಂಬ ನಂಬಿಕೆಗಳಿವೆ. ಶಿವರಾತ್ರಿಯ ದಿನವಿಡೀ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ಆರಾಧಿಸಿದರೆ ಸಕಲ ಪಾಪಗಳೂ ಕಳೆಯುತ್ತವೆ ಎಂದು ನಂಬಲಾಗಿದೆ. ಎಲ್ಲಾ ಜೀವರಾಶಿಗಳನ್ನು ಪೊರೆಯುವ ಶಿವ ಎಲ್ಲ ಆಡಂಬರಗಳಿಂದ ಮುಕ್ತ. ಆತ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ. ಭಸ್ಮವನ್ನು ಬಳಿದುಕೊಂಡು, ಹುಲಿ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿರುವ ಸರಳ ಮತ್ತು ಅಮೋಘ ಶಕ್ತಿ.
ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿ ಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ.
ಶಿವರಾತ್ರಿಯ ಮಹಿಮೆ : ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು ಎಂಬುದು ವಿಶೇಷ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡಿ ಶಿವನಾಮ ಪಠಿಸುತ್ತಾ, ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ, ವಿವಾಹವಾದಳೆಂಬುದು ಪ್ರತೀತಿ. ಶಿವ ರುದ್ರತಾಂಡವನಾಡಿದ ರಾತ್ರಿಯೂ ಹೌದು, ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಹಾಗಾಗಿ, ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ. ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಲಿಂಗಪುರಾಣದ ಪ್ರಕಾರ, ಲಿಂಗ ರೂಪಿಯಾಗಿ ಭಕ್ತರಿಗೆ ಅನುಗ್ರಹ ನೀಡಿದ ದಿನವಿದು. ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.
ಜಾಗರಣೆ, ಹಬ್ಬದ ವಿಶೇಷ ಆಚರಣೆ: ಕಾಶಿ ವಿಶ್ವನಾಥ, ಗೋಕರ್ಣದ ಮಹಾಬಲೇಶ್ವರ, ರಾಮೇಶ್ವರದ ರಾಮೇಶ್ವರ ಸೇರಿದಂತೆ ರಾಜ್ಯ, ದೇಶ, ವಿದೇಶಗಳ ಶಿವದೇವಾಲಯಗಳಲ್ಲಿ ಅಂದು ವಿಶೇಷ ಪೂಜೆ ನಡೆಯುತ್ತದೆ. ಬಿಲ್ವಾರ್ಚನೆ, ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನನ್ನು ಆರಾಧಿಸಲಾಗುತ್ತದೆ. ಇಡೀ ರಾತ್ರಿ ಶಿವದೇವಾಲಯಗಳಲ್ಲಿ ರುದ್ರಪಠಣದ ಜೊತೆ ಜಾಗರಣೆ ನಡೆಯುತ್ತದೆ. ಶಿವರಾತ್ರಿಯಂದು ಬೆಳಗ್ಗೆ ಬೇಗನೆ ಏಳುವ ಭಕ್ತರು, ಸ್ನಾನ ಮಾಡಿ, ಶುಚಿರ್ಭೂತರಾಗಿ ಶಿವದೇವಾಲಯಕ್ಕೆ ತೆರಳುತ್ತಾರೆ. ಕೆಲವರು ಕೈಲಾಸಯಂತ್ರ ರಚಿಸಿ, ಮನೆಯಲ್ಲಿಯೇ ಶಿವನಿಗೆ ವಿಶೇಷ ಪೂಜೆ ನಡೆಸುತ್ತಾರೆ. ಗಂಗಾ, ಬ್ರಹ್ಮಪುತ್ರ, ಕೃಷ್ಣ, ಕಾವೇರಿ, ತ್ರಿವೇಣಿ ಸಂಗಮ ಸೇರಿದಂತೆ ಪುಣ್ಯನದಿಗಳಲ್ಲಿ ಭಕ್ತರು ಸ್ನಾನ ಮಾಡುತ್ತಾರೆ. ಕೆಲವರು ಹಾಲು, ಹಣ್ಣು ಸೇವಿಸಿ ಲಘು ಉಪಹಾರ ಸೇವಿಸಿದರೆ, ಕೆಲವು ಭಕ್ತರು ದಿನವಿಡಿ ಏನನ್ನೂ ತಿನ್ನದೆ, ನೀರನ್ನೂ ಕುಡಿಯದೆ ಉಪವಾಸ ಇರುತ್ತಾರೆ. ಭಸ್ಮ ಲೇಪಿಸಿಕೊಂಡು, ಬಿಲ್ವಾರ್ಚನೆ ಮೂಲಕ ರುದ್ರ ಪಠಣ ಹಬ್ಬದ ಆಚರಣೆಯ ವಿಶೇಷ. ಅಭಿಷೇಕಪ್ರಿಯ ಎಂದೇ ಖ್ಯಾತನಾದ ಶಿವನಿಗೆ ದಿನವಿಡಿ ಹಾಲು, ಜೇನುತುಪ್ಪ ಹಾಗೂ ನೀರಿನ ಅಭಿಷೇಕ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಶಿವಲಿಂಗಕ್ಕೆ ಅಭಿಷೇಕ ಮಾಡಲಾಗುತ್ತದೆ. ಬಿಲ್ವಪತ್ರೆ, ತುಳಸಿ, ಶ್ರೀ ಗಂಧ, ಹಾಲು, ಜೇನುತುಪ್ಪಗಳಿಂದ ಅಭಿಷೇಕ ನಡೆಯುತ್ತದೆ. ಶಿವ ಪಂಚಾಕ್ಷರಿ ಮಂತ್ರ “ಓಂ ನಮ: ಶಿವಾಯ”, ಹರ ಹರ ಮಹಾದೇವ, ಶಂಭೋ ಶಂಕರ... ಶಿವದೇವಾಲಯಗಳಲ್ಲಿ ಮಾರ್ದನಿಸುತ್ತದೆ. ನಾಲ್ಕು ಆಯಾಮಗಳ ರುದ್ರಪಠಣ, ಶಿವರಾತ್ರಿ ಪೂಜೆಯ ವಿಶೇಷ. ಶಿವಪುರಾಣದ ಪ್ರಕಾರ ರುದ್ರ ಹಾಗೂ ಚಮೆಗಳ ಪಠಣ ಶಿವನಿಗೆ ಅಚ್ಚುಮೆಚ್ಚು. ದೇವಾಲಯಗಳಲ್ಲಿ ಸಂಜೆ 6 ಗಂಟೆಯಿಂದ ಮೊದಲ್ಗೊಂಡು ಮುಂಜಾನೆ 6 ಗಂಟೆಯವರೆಗೆ ರುದ್ರಪಠಣದ ಮೂಲಕ ಶಿವ ಸ್ತುತಿ, ಜಾಗರಣೆ ನಡೆಯುತ್ತದೆ. ಪ್ರತಿ 3 ಗಂಟೆಗೊಮ್ಮೆ ಮಂಗಳಾರತಿ ಮಾಡಲಾಗುತ್ತದೆ. ಬೆಳಗ್ಗೆ 6 ಗಂಟೆಗೆ ಮಹಾಮಂಗಳಾರತಿ ಆಚರಣೆ ಮೂಲಕ ಜಾಗರಣೆ ಮುಕ್ತಾಯಗೊಳ್ಳುತ್ತದೆ. ಮೊದಲನೆಯ ಆಯಾಮದಲ್ಲಿ ಹಾಲು, ಎರಡನೆಯ ಆಯಾಮದಲ್ಲಿ ಮೊಸರು, ಮೂರನೆಯ ಆಯಾಮದಲ್ಲಿ ತುಪ್ಪ ಹಾಗೂ ನಾಲ್ಕನೆಯ ಆಯಾಮದಲ್ಲಿ ಜೇನು-ತುಪ್ಪಗಳಿಂದ ಶಿವನಿಗೆ ಅಭಿಷೇಕ ಮಾಡುವ ಪದ್ಧತಿಯೂ ಕೆಲವೆಡೆ ಇದೆ.
? ಯಜಾಸ್ ದುದ್ದಿಯಂಡ,
ವೀರಾಜಪೇಟೆ.