ಗೋಣಿಕೊಪ್ಪ ವರದಿ, ಮಾ. 5: ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಮುಂದುವರೆಯಬೇಕು ಎಂದು ಗೋಣಿಕೊಪ್ಪಲು ಕಾವೇರಿ ಎಜುಕೇಷನ್ ಸೊಸೈಟಿ ನಿರ್ದೇಶಕ ಪ್ರೊ. ಇಟ್ಟೀರ ಕೆ. ಬಿದ್ದಪ್ಪ ಅಭಿಪ್ರಾಯಪಟ್ಟರು.
ಇಲ್ಲಿನ ಕಾವೇರಿ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿ ಗ್ರಾಮೀಣ ಪ್ರದೇಶದಿಂದ ಬಂದವರು ವಿಜ್ಞಾನ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರುತ್ತಿರುವದು ಒಳ್ಳೆಯ ಬೆಳವಣಿಗೆಯಾಗಿದೆ. ನಮ್ಮ ದೇಶದಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ವಿಜ್ಞಾನ ಕ್ಷೇತ್ರದಲ್ಲಿ ಮುಂದುವರೆಯಬೇಕು. ವಿಜ್ಞಾನದ ಹೆಸರಿನಲ್ಲಿ ಬೇಕಾಬಿಟ್ಟಿ ಪರಿಸರ ನಾಶ ಮಾಡದೆ ಮುಂದಿನ ಮನುಕುಲಕ್ಕೆ ಸುಂದರ ಪರಿಸರವನ್ನು ಉಳಿಸಿ ಬೆಳೆಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಜೆ.ಜಿ. ಮಂಜುನಾಥ ಅವರು ‘ಎಲೊಕ್ಟ್ರೋ ಕೆಮಿಕಲ್ ಸೆನ್ಸಾರ್ ಫಾರ್ ದ ಡೆಟರ್ಮಿನೇಷನ್ ಆಫ್ ಬಯೋ ಏಕ್ಟಿವ್ ಮಲ್‍ಕ್ಯೂಸ್’ ಎಂಬ ವಿಷಯದಲ್ಲಿ ಮಾತನಾಡಿದರು.
ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಮಾನವನು ಪರಿಸರ ಮೇಲೆ ನಡೆಸುತ್ತಿರುವ ದೌರ್ಜನ್ಯ ಮತ್ತು ಅದರಿಂದಾಗುವ ದುಷ್ಪರಿಣಾಮಗಳನ್ನು ನೃತ್ಯ ಪ್ರದರ್ಶನದ ಮೂಲಕ ತೋರಿಸಿ ಅರಿವು ಮೂಡಿಸಿದರು.
ಈ ಸಂದರ್ಭ ಉಪ ಪ್ರಾಂಶುಪಾಲ ಪ್ರೊ. ಎ.ಎಂ. ಕಮಲಾಕ್ಷಿ, ಹಿರಿಯ ಪ್ರಾಧ್ಯಾಪಕಿ ಪ್ರೊ. ಕೆ.ಎಸ್. ತುಳಸಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಕೆ.ವಿ. ಕುಸುಮಾಧರ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎ.ಬಿ. ನರೇಶ್, ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥೆ ಸಿ.ಎಲ್. ನಿಶಾ, ಪ್ರಾಣಿ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಕೃತಿಕ ಉಪಸ್ಥಿತರಿದ್ದರು.