ಕುಶಾಲನಗರ, ಮಾ. 5: ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಪೋಷಕರು, ಶಿಕ್ಷಕರು ಚಿಂತನೆ ಹರಿಸಬೇಕಿದೆ ಎಂದು ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪೆರಿಗ್ರೀನ್ ಎಸ್ ಮಚ್ಚಾಡೋ ಹೇಳಿದರು.

ಸ್ಥಳೀಯ ಕನ್ನಿಕಾ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸರಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾ ಧ್ಯಾಯರ ಕೊಡಗು ಜಿಲ್ಲಾ ಸಂಘದ 2018-19 ರ ಸಾಲಿನ ವಾರ್ಷಿಕ ಮಹಾಸಭೆ, ಶೈಕ್ಷಣಿಕ ವಿಚಾರಗೋಷ್ಠಿ ಹಾಗೂ ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸರಕಾರಿ ಶಾಲೆಗಳು ಉಳಿದರೆ ಮಾತ್ರ ಶಿಕ್ಷಕ ವೃಂದದ ಉಳಿವು ಸಾಧ್ಯ ಎಂದ ಅವರು, ಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಬೆಟ್ಟನಾಯಕ ಮಾತನಾಡಿದರು.

ಕೂಡಿಗೆ ಡಯಟ್ ಉಪ ನಿರ್ದೇಶಕ ವಾಲ್ಟರ್ ಹಿಲೇರಿ ಡಿ ಮೆಲ್ಲೋ, ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ಎಸ್. ಚೇತನ್ ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಅಧ್ಯಕ್ಷ ಹೆಚ್.ಕೆ. ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.

ಈ ಸಂದರ್ಭ ಜಿಲ್ಲಾ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು, ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಪ್ರಾಥಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ.ಸಿ. ರಾಜು ಮತ್ತಿತರರು ಇದ್ದರು.