ಸೋಮವಾರಪೇಟೆ,ಮಾ.8: ಸಮೀಪದ ಮಸಗೋಡು ಚನ್ನಮ್ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯ ಮೇಲೆ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಮತ್ತು ಶಿಕ್ಷಕರು ಜಾತಿ ನಿಂದನೆ ದಲಿತ ದೌರ್ಜನ್ಯ ನಡೆಸಿದ್ದು, ಈ ಬಗ್ಗೆ ದೂರು ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ದಲಿತ ಪರ ಸಂಘಟನೆಗಳ ಪ್ರಮುಖರು ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಬಿ.ಎಸ್.ಪಿ. ಜಿಲ್ಲಾಧ್ಯಕ್ಷ ಮೋಹನ್ ಮೌರ್ಯ, ದಲಿತ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ. ಇದನ್ನು ಖಂಡಿಸಿ ತಾ. 11ರಂದು ಸೋಮವಾರಪೇಟೆಯಲ್ಲಿ ಪೊಲೀಸ್ ಇಲಾಖೆಯ ವಿರುದ್ಧ ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

ಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ದಿವಾಕರ್, ಶಾಂತಳ್ಳಿ ಹೋಬಳಿ ಅಂಬೇಡ್ಕರ್ ಜನ್ಮದಿನಾಚರಣಾ ಸಮಿತಿಯ ಅಧ್ಯಕ್ಷ ವಿಜಯಕುಮಾರ್, ದಸಂಸ ಪದಾಧಿಕಾರಿ ವೆಂಕಟೇಶ್ ಅವರುಗಳು ಉಪಸ್ಥಿತರಿದ್ದರು.