ಮಡಿಕೇರಿ, ಮಾ. 13: ಕೊಡಗು ಪ್ರೆಸ್‍ಕ್ಲಬ್ ಆಶ್ರಯದಲ್ಲಿ ತಾ.15 ರಂದು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಸೆಮಿನಾರ್ ಹಾಲ್‍ನಲ್ಲಿ ಜಿಲ್ಲೆಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕ್ಲಬ್ ಪ್ರಧಾನ ಕಾರ್ಯದರ್ಶಿ ಆರ್.ಸುಬ್ರಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಡಗಿನ ಪ್ರಕೃತಿ ವಿಕೋಪ ಪರಿಸ್ಥಿತಿಯಿಂದ ಎದುರಾದ ಪರಿಸ್ಥಿತಿಗಳ ವಾಸ್ತವ ಚಿತ್ರಣ ಕುರಿತು ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು ಬರೆದಿರುವ ಚೊಚ್ಚಲ ಕೃತಿ ‘ಪ್ರಕೃತಿ ಮುನಿದ ಹಾದಿಯಲ್ಲಿ...’ ಅನಾವರಣ ಪ್ರಯುಕ್ತ ಕೊಡಗಿನ ಪರಿಸರ ಮತ್ತು ಅಭಿವೃದ್ಧಿ ವಿಷಯದ ಕುರಿತು ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಹಾಗೂ ವೀರಾಜಪೇಟೆ ಕಾವೇರಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಥಮ, ದ್ವಿತೀಯ ಹಾಗೂ ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ತಾ. 26 ರಂದು ನಡೆಯುವ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುತ್ತದೆ.

ಬೆಳಿಗ್ಗೆ 10.30ಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಪ್ರಾಂಶುಪಾಲರಾದ ಪ್ರೊ.ಟಿ.ಡಿ. ತಿಮ್ಮಯ್ಯ ಅಧ್ಯಕ್ಷತೆಯಲ್ಲಿ ಭಾಷಣ ಸ್ಪರ್ಧೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಅಧ್ಯಕ್ಷೆ ಬಿ.ಆರ್. ಸವಿತಾ ರೈ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಡಿಕೇರಿ ಕೊಡವ ಸಮಾಜದ ಪೊಮ್ಮಕ್ಕಡ ಕೂಟ ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಪತ್ರಿಕೋದ್ಯಮ ವಿಭಾಗ ಉಪನ್ಯಾಸಕರಾದ ಕೆ.ಎಸ್. ಇಳೆಯರಾಜ, ಎ.ಎನ್. ಮೋನಿಕಾ, ವೀರಾಜಪೇಟೆ ಕಾವೇರಿ ಕಾಲೇಜು ಪತ್ರಿಕೋದ್ಯಮ ವಿಭಾಗ ಉಪನ್ಯಾಸಕ ಐನಂಡ ಸಚಿನ್ ಬೋಪಣ್ಣ, ಲೇಖಕ ಕಿಶೋರ್ ರೈ ಕತ್ತಲೆಕಾಡು ಪಾಲ್ಗೊಳ್ಳಲಿದ್ದಾರೆ.

ಭಾಷಣ ಸ್ಪರ್ಧೆ ತೀರ್ಪುಗಾರರಾಗಿ ಕೂರ್ಗ್ ಟ್ರ್ಯಾವೆಲ್ ಅಸೋಸಿಯೇಷನ್ ಅಧ್ಯಕ್ಷ ಚೈಯ್ಯಂಡ ಸತ್ಯ ಗಣಪತಿ, ಹಿರಿಯ ಪತ್ರಕರ್ತರಾದ ಬಿ.ಸಿ. ದಿನೇಶ್, ಬಾಚರಣಿಯಂಡ ಅನು ಕಾರ್ಯಪ್ಪ ಕಾರ್ಯನಿರ್ವಹಿಸಲಿದ್ದಾರೆ.