ಮಡಿಕೇರಿ, ಮಾ. 14: ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವ ಸಿದ್ಧತೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಪರೀಕ್ಷಾ ಕೇಂದ್ರದಲ್ಲಿ ಸಿಸಿ ಟಿವಿ ಅಳವಡಿಸುವದು, ಕುಡಿಯುವ ನೀರು ವ್ಯವಸ್ಥೆ ಮಾಡುವದು, ಸೂಕ್ತ ಭದ್ರತೆ ಕಲ್ಪಿಸುವದು ಮತ್ತಿತರ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಎಸ್‍ಎಸ್‍ಎಲ್‍ಸಿ ಪ್ರಶ್ನೆ ಪತ್ರಿಕೆ ಸಂಬಂಧಿಸಿದಂತೆ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಖಜಾನಾಧಿಕಾರಿಗಳು ಅಗತ್ಯ ಕ್ರಮವಹಿಸಬೇಕು. ಪರೀಕ್ಷೆಯನ್ನು ಯಾವದೇ ಲೋಪವಿಲ್ಲದೆ ವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಎಸ್‍ಎಸ್‍ಎಲ್‍ಸಿ ಪರೀಕ್ಷಾ ಸಂದರ್ಭದಲ್ಲಿ ಯಾವದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಅವರು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ ಅವರು ಈ ಬಾರಿ ಜಿಲ್ಲೆಯಲ್ಲಿ 6,832 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.

ಪರೀಕ್ಷೆಯು ಬೆಳಗ್ಗೆ 9.30 ಗಂಟೆಗೆ ಆರಂಭವಾಗಲಿದ್ದು, 9.45 ರ ನಂತರ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದರು.

ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಎಲ್ಲರೂ ಸಹಕರಿಸುವಂತೆ ಅವರು ಕೋರಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಾಯತ್ರಿ (ಮಡಿಕೇರಿ), ನಾಗರಾಜಯ್ಯ (ಸೋಮವಾರಪೇಟೆ), ಶ್ರೀಶೈಲ ಬೀಳಗಿ (ವೀರಾಜಪೇಟೆ), ಮುಖ್ಯ ಶಿಕ್ಷಕರು, ಇತರರು ಇದ್ದರು.