ಸೋಮವಾರಪೇಟೆ, ಮಾ. 16: ಲೋಕಸಭಾ ಚುನಾವಣೆ 2019ರ ಸ್ವೀಪ್ ಕಾರ್ಯಕ್ರಮದಲ್ಲಿ ಮತದಾರರ ನೋಂದಣಿ ಹಾಗೂ ಜಾಗೃತಿ ಕಾರ್ಯಕ್ರಮದ ಅಂಗವಾಗಿ ವಿಶೇಷಚೇತನ ಮತದಾರರಿಂದ ತ್ರಿ ಚಕ್ರ ವಾಹನ ರ್ಯಾಲಿ ಪಟ್ಟಣದಲ್ಲಿ ನಡೆಯಿತು. ತಾಲೂಕು ಪಂಚಾಯಿತಿ ಆವರಣದಲ್ಲಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಸುನಿಲ್ ಅವರು ವಾಹನ ರ್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭ ಮತದಾನ ಅರಿವಿನ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ನಂತರ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ವಾಹನ ಜಾಥಾ ನಡೆಯಿತು. ಈ ಸಂದರ್ಭ ಹಿರಿಯ ಸಿವಿಲ್ ನ್ಯಾಯಾಧೀಶರಾದ ಪರಶುರಾಮ್ ಎಫ್. ದೊಡ್ಡಮನಿ, ವಕೀಲರ ಸಂಘದ ಅಧ್ಯಕ್ಷ ಡಿ.ಕೆ.ತಿಮ್ಮಯ್ಯ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.