ಮಡಿಕೇರಿ, ಮಾ. 18 : ಜಿಲ್ಲಾಡಳಿತ, ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಅಭಿಯಾನ ನಡೆಯಿತು.
ಈ ಸಂದರ್ಭದಲ್ಲಿ ಮತದಾನದ ಮಹತ್ವ ಕುರಿತು ಪ್ರತಿಜ್ಞಾ ವಿಧಿಯನ್ನು ಮಡಿಕೇರಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಅವರು ಬೋಧಿಸಿದರು. ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಹಾಗೂ ಶಾಂತಿಯುತ ಚುನಾವಣೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಧರ್ಮ, ಜಾತಿ, ಮತ ಭಾಷೆ ಅಥವಾ ಯಾವದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸು ತ್ತೇವೆ ಎಂದು ಪ್ರತಿಜ್ಞೆ ಸ್ವೀಕರಿಸ ಲಾಯಿತು.
ಬಳಿಕ ವಿದ್ಯುನ್ಮಾನ ಮತಯಂತ್ರ ಕಾರ್ಯಚಟುವಟಿಕೆ ಬಗ್ಗೆ ತರಬೇತಿ ದಾರ ಷಂಶುದ್ದೀನ್ ಅವರು ಮಾಹಿತಿ ನೀಡಿದರು. ಜಿ.ಪಂ. ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎ. ಸಿ. ಶಿವಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್, ಜಿ. ಪಂ. ಯೋಜನಾ ಶಾಖೆಯ ವ್ಯವಸ್ಥಾಪಕ ನವೀನ್ ಇತರರು ಇದ್ದರು.