ಮಡಿಕೇರಿ, ಮಾ. 24: ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ವತಿಯಿಂದ ಲೋಕಸಭಾ ಚುನಾವಣೆ ಸಂಬಂಧ ‘ಪ್ರತಿಶತ ಮತದಾನ ವಾಗ್ದಾನ’ ವಿಷಯ ಕುರಿತು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಹಾಗೂ ವಿಶ್ವ ಜಲ ದಿನಾಚರಣೆ ನಡೆಯಿತು.

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ಅಧ್ಯಕ್ಷೆ ಕೆ. ಲಕ್ಷ್ಮಿಪ್ರಿಯಾ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮತದಾನದ ಮಹತ್ವದ ಬಗ್ಗೆ ಬೂತ್ ಮಟ್ಟದ ಅಧಿಕಾರಿಗಳು ಜಾಗೃತಿ ಮೂಡಿಸುವಂತಾಗಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಪೂರ್ಣಗೊಂಡವರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಈ ಬಗ್ಗೆ ಪರಿಶೀಲಿಸಿಕೊಳ್ಳಬೇಕಿದೆ. ಜೊತೆಗೆ ವಿದ್ಯುನ್ಮಾನ ಮತಯಂತ್ರಗಳಾದ ಬ್ಯಾಲೆಟ್ ಯೂನಿಟ್, ಕಂಟ್ರೋಲ್ ಯೂನಿಟ್ ಮತ್ತು ವಿವಿಪ್ಯಾಟ್ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಈ ಸಂಬಂಧ ಜಿಲ್ಲೆಯಲ್ಲಿ ಒಟ್ಟು 41 ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಜಿ.ಪಂ. ಉಪಕಾರ್ಯದರ್ಶಿ ಗುಡೂರು ಭೀಮಸೇನ ಮಾತನಾಡಿ, ಬೂತ್ ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಮತಗಟ್ಟೆ ಕೇಂದ್ರಗಳಲ್ಲಿ ಶೌಚಾಲಯ, ರ್ಯಾಂಪ್, ವಿದ್ಯುತ್ ಸಂಪರ್ಕ, ಕುಡಿಯುವ ನೀರು ಇದೆಯೇ ಎಂಬದನ್ನು ಗಮನಿಸಬೇಕು. ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು. ಜೊತೆಗೆ ಮತದಾನದಂದು ಮತಗಟ್ಟೆಗೆ ತೆರಳಿ ಮತದಾನ ಮಾಡುವಂತಾಗಲು ಮಾಹಿತಿ ನೀಡಬೇಕು ಎಂದು ಹೇಳಿದರು.

ಜಲ ದಿನಾಚರಣೆ ಬಗ್ಗೆ ಮಾತನಾಡಿದ ಗುಡೂರು ಭೀಮಸೇನಾ, ಭೂಮಿಯಲ್ಲಿ ಶೇ. 3 ರಷ್ಟು ಮಾತ್ರ ಕುಡಿಯಲು ನೀರು ಯೋಗ್ಯವಾಗಿದೆ ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಜಿ.ಪಂ. ಸಹಾಯಕ ಕಾರ್ಯದರ್ಶಿ ಶ್ರೀಕಂಠ ಮೂರ್ತಿ ಇತರರು ಇದ್ದರು. ವಿಶ್ವ ಜಲ ದಿನ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.

ಮಧು ನಿರೂಪಿಸಿದರು, ಶಕುಂತಲಾ ಪ್ರಾರ್ಥಿಸಿದರು, ತಾ.ಪಂ. ಇಒ ಲಕ್ಷ್ಮಿ ಸ್ವಾಗತಿಸಿ, ವಂದಿಸಿದರು.