ಮಡಿಕೇರಿ, ಮಾ. 29: ರೈತರ ಕೃಷಿ ಸಾಲ ಮನ್ನಾ, ಬೆಳೆಗಳಿಗೆ ಬೆಂಬಲ ಬೆಲೆ ಹಾಗೂ ಅರಣ್ಯ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿರುವ ಬಿ.ಜೆ.ಪಿ. ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಯ್ದೆಗಳನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ. ಮಂಜುನಾಥ್‍ಕುಮಾರ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಟು ಅಮಾನೀಕರಣ ಮತ್ತು ಅವೈಜ್ಞಾನಿಕ ಜಿಎಸ್‍ಟಿ ಪದ್ಧತಿಯನ್ನು ಜಾರಿಗೆ ತಂದು ಜನಸಮಾನ್ಯರನ್ನು ಸಂಕಷ್ಟಕ್ಕೆ ಸಿಲುಕಿಸುವ ಕಾರ್ಯವನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದೆ ಎಂದು ಆರೋಪಿಸಿದ ಮಂಜುನಾಥ್ ಕುಮಾರ್ ಬಡವರು ಹಾಗೂ ಜನಸಾಮಾನ್ಯರ ಪರವಾದ ಯೋಜನೆಗಳನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೊಡಗು ಜಿಲ್ಲಾ ಜಾತ್ಯತೀತ ಜನತಾದಳ ಪಕ್ಷದೊಳಗಿರ ಬಹುದಾದ ಗೊಂದಲಗಳಿಗೆ ನಾವು ಮೂಗು ತೂರಿಸುವದಿಲ್ಲವೆಂದು ಸ್ಪಷ್ಟಪಡಿಸಿರುವ ಅವರು, ಮೈತ್ರಿ ಪಕ್ಷದ ಅಭ್ಯರ್ಥಿಯ ಗೆಲವಿಗೆ ಜೆಡಿಎಸ್‍ನ ಎಲ್ಲಾ ಮುಖಂಡರು ಸಹಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಮುಖ ಟಿ.ಪಿ. ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕÀ್ಷ ಹನೀಫ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ ಹಾಗೂ ಪ್ರಮುಖರಾದ ಎಂ.ಎ. ಉಸ್ಮಾನ್ ಉಪಸ್ಥಿತರಿದ್ದರು.