ಮಡಿಕೇರಿ, ಏ. 5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 112ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ನಗರದ ಕೋಟೆ ಹಳೇ ವಿಧಾನಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಅವರುಗಳು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಜಿ.ಪಂ.ಉಪ ಕಾರ್ಯದರ್ಶಿ ಗುಡೂರು ಭೀಮಸೇನಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಹಂತೇಶಪ್ಪ, ಐಟಿಡಿಪಿ ಅಧಿಕಾರಿ ಸಿ.ಶಿವಕುಮಾರ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಚಿಕ್ಕಬಸವಯ್ಯ, ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಬಾಬು ಜಗಜೀವನ್ ರಾಮ್ ಅವರು ಉಪ ಪ್ರಧಾನಿಯಾಗಿ, ಕಾರ್ಮಿಕ, ರಕ್ಷಣಾ, ಕೃಷಿ ಸಚಿವರಾಗಿದ್ದ ಅವಧಿಯಲ್ಲಿ ತೆಗೆದುಕೊಂಡ ಕಾರ್ಯಕ್ರಮಗಳು ಜನ ಮೆಚ್ಚುಗೆಗೆ ಪಾತ್ರವಾಗಿದ್ದವು. ಅವರು ಸ್ವಾತಂತ್ರ್ಯ ಹೋರಾಟದ ಜೊತೆಗೆ ಸಮಾಜ ಸೇವಕರಾಗಿ ರಾಷ್ಟ್ರದ ಅಭಿವೃದ್ಧಿಗೆ ದುಡಿದಿದ್ದರು ಎಂದು ಗಣ್ಯರು ಸ್ಮರಿಸಿದರು.
ಸೋಮವಾರಪೇಟೆ
ಸೋಮವಾರಪೇಟೆ ತಾಲೂಕು ಆಡಳಿತದ ವತಿಯಿಂದ ಹಸಿರು ಕ್ರಾಂತಿ ಹರಿಕಾರ ಬಾಬು ಜಗಜೀವನರಾಂ ಜನ್ಮ ದಿನಾಚರಣೆಯನ್ನು ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಚರಿಸಲಾಯಿತು.
ತಹಸೀಲ್ದಾರ್ ಗೋವಿಂದರಾಜ್ ಜಗಜೀವನರಾಂ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಬಾಬೂಜಿ ಸ್ವಾತಂತ್ರ್ಯ ಹೋರಾಟಗಾರರಷ್ಟೆ ಅಲ್ಲದೆ ಸಮಾಜಸೇವಕರು ಆಗಿದ್ದರು. ಕೃಷಿ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾದುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಖರ್, ಬಿ.ಇ.ಒ. ನಾಗರಾಜಯ್ಯ ಇದ್ದರು.