ಸುಂಟಿಕೊಪ್ಪ, ಏ. 10: ಸರ್ಕಾರಿ ಪ್ರೌಢಶಾಲೆಯಲ್ಲಿ ಪಂಚಾಯತ್ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಇಲಾಖೆ ಮತ್ತು ಶಾಲೆಯ ಇಕೋ ಕ್ಲಬ್ ವತಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಶಾಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಶಾಲೆಯಲ್ಲಿ ಜಲ ವರ್ಷ ಹಾಗೂ ವಿಶ್ವ ಜಲ ದಿನಾಚರಣೆ ಅಂಗವಾಗಿ ಜಲಜಾಗೃತಿ ಅಭಿಯಾನವನ್ನು ಆಚರಿಸಲಾಯಿತು.
ಜಲ ದಿನದ ಮಹತ್ವ ಕುರಿತು ಮಾತನಾಡಿದ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಯೋಜಕ, ಇಕೋ ಕ್ಲಬ್ನ ಸಂಚಾಲಕ ಟಿ.ಜಿ. ಪ್ರೇಮಕುಮಾರ್, ಪ್ರಕೃತಿಯಲ್ಲಿ ಸಿಗುವ ನೀರು ಅಮೂಲ್ಯ ಸಂಪತ್ತು. ಪ್ರತಿಯೊಂದು ಜೀವಿಗೂ ನೀರು ಅತಿ ಅವಶ್ಯಕ. ಆದರೆ, ಇತ್ತೀಚಿನ ವರ್ಷಗಳಲ್ಲಿ ಮಳೆ ಪ್ರಮಾಣ ಕ್ಷೀಣಿಸಿರುವದರಿಂದ ಜಲಮೂಲಗಳು ಬತ್ತಿಹೋಗಿವೆ. ಜಲಮೂಲಗಳ ಸಂರಕ್ಷಣೆಗೆ ನಾವು ಹೆಚ್ಚಿನ ಆದ್ಯತೆ ನೀಡದಿದ್ದಲ್ಲಿ ಭವಿಷ್ಯತ್ತಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಜಲ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಮುಖ್ಯ ಶಿಕ್ಷಕ ಬಾಲಕೃಷ್ಣ, ಪ್ರತಿಯೊಬ್ಬರೂ ನೀರನ್ನು ಪೋಲು ಮಾಡದೆ ಮಿತವಾಗಿ ಬಳಕೆ ಮಾಡುವ ಮೂಲಕ ನೀರನ್ನು ಸಂರಕ್ಷಿಸಬೇಕು. ಜನರ ಮೂಲಭೂತ ಅವಶ್ಯಕತೆಗಳಲ್ಲಿ ಒಂದಾದ ಕುಡಿಯುವ ನೀರಿಗಾಗಿ ಜನರು ಪರಿತಪಿಸುವ ದುಸ್ಥಿತಿ ಬಂದಿರುವದು ದುದೈರ್ವದ ಸಂಗತಿಯಾಗಿದೆ ಎಂದರು.
ಜಲ ಸಂರಕ್ಷಣೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತಗೊಂಡ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕಿಯರಾದ ಕೆ.ಕೆ. ಪುಷ್ಪ, ಎಸ್.ಆರ್. ಚಿತ್ರಾ, ಮಂಜುಳಾ ಎಂ. ಕೆರೂರ್ ಇದ್ದರು. ವಿದ್ಯಾರ್ಥಿಗಳಿಗೆ ಪರಿಸರ ಮತ್ತು ಜಲ ಸಂರಕ್ಷಣೆ ಕುರಿತಂತೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.