ವೀರಾಜಪೇಟೆ, ಏ. 20: ಇಲ್ಲಿನ ಕಾವೇರಿ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿದ್ದ ಕಾಫಿ ಬೆಳೆಗಾರ ಪೊನ್ನಿಮಾಡ ಕಟ್ಟಿ ಪೊನ್ನಪ್ಪ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಕ್ಷಣದೊಂದಿಗೆ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು ಹಾಗೂ ಪ್ರಕೃತಿಯನ್ನು ಪೂಜಿಸಿ ಮುಂದಿನ ಪೀಳಿಗೆಗೆ ಉಳಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಸಮಾರಂಭದ ಮುಖ್ಯ ಅತಿಥಿಗಳಾದ ಕಾವೇರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೆಶಕರಾದ ಪ್ರೊ. ಇಟ್ಟಿರ ಬಿದ್ದಪ್ಪ ಅವರು ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಗೆ ಅನುಗುಣವಾಗಿ ಉದ್ಯೋಗ ಪಡೆದುಕೊಂಡು ಸಮಾಜದ ಏಳಿಗೆಗೆ ಶ್ರಮಿಸಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾವೇರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎ.ಸಿ. ಗಣಪತಿ ಅವರು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ. ಎ.ಎಂ. ಕಮಲಾಕ್ಷಿ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ. ಎಂ.ಎಂ. ದೇಚಮ್ಮ, ಪುಚ್ಚಿಮಾಡ ಸುಭಾಷ್, ಕನ್ನಡ ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ.ಎನ್. ಶಂಕರ್‍ನಾರಾಯಣ್, ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಎಲ್.ಆರ್. ರಾಘವೇಂದ್ರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.