ಮಡಿಕೇರಿ, ಏ. 24: ನ್ಯಾಯಾಲಯದ ವಿವಿಧ ಹಂತದಲ್ಲಿರುವ ಹಿರಿಯ ನಾಗರಿಕರ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ತಾ.25 ರಂದು ವಿಶೇಷ ಲೋಕ ಅದಾಲತ್ ನಡೆಯಲಿದ್ದು, ಹಿರಿಯ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಒಂದನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಡಿ. ಪವನೇಶ್ ಅವರು ಕೋರಿದ್ದಾರೆ. ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಿರಿಯ ನಾಗರಿಕರು ನ್ಯಾಯಾಲಯಕ್ಕೆ ಅಲೆದಾಡುವದನ್ನು ತಪ್ಪಿಸುವ ಉದ್ದೇಶದಿಂದ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಬಹುದಾದ ಹಿರಿಯ ನಾಗರಿಕರ ಪ್ರಕರಣಗಳನ್ನು ವಿಶೇಷ ಲೋಕ ಅದಾಲತ್ ಮೂಲಕ ಹೈಕೋರ್ಟ್ ನಿರ್ದೇಶನದಂತೆ ಬಗೆಹರಿಸಲು ಪ್ರಯತ್ನಿಸಲಾಗುತ್ತದೆ ಎಂದು ಅವರು ಹೇಳಿದರು.
ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪ್ರತಿ ವರ್ಷದಂತೆ ಈ ಬಾರಿಯೂ ತಾ. 26 ರಿಂದ ಮೇ 7 ರವರೆಗೆ ಕಾನೂನು ಸಾಕ್ಷರತಾ ರಥ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಸಂಚರಿಸಲಿದ್ದು, ಕಾನೂನಿಗೆ ಸಂಬಂಧಿಸಿದಂತೆ ಹಾಡಿಗಳಲ್ಲಿ ವಿಶೇಷ ಜಾಗೃತಿ ಅಭಿಯಾನ ನಡೆಯಲಿದೆ ಎಂದು ನ್ಯಾಯಾಧೀಶರು ವಿವರಿಸಿದರು.
ಮೇ 1 ರಂದು ಕಾರ್ಮಿಕ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗಾಗಿ ಕಾನೂನು ಬಗ್ಗೆ ಮಾಹಿತಿ ನೀಡಲಾಗುವದು. ಮೇ 30 ರಂದು ತಂಬಾಕು ವಿರೋಧಿ ದಿನಾಚರಣೆ ಬಗ್ಗೆ ಜಾಗೃತಿ ಮೂಡಿಸಬೇಕಿದ್ದು, ಆ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೈಜೋಡಿಸುವಂತೆ ಅವರು ತಿಳಿಸಿದರು.
ಜೂ. 5 ರಂದು ಪರಿಸರ ದಿನಾಚರಣೆ ಪ್ರಯುಕ್ತ ಶಾಲಾ ಕಾಲೇಜುಗಳು, ಹಾಸ್ಟೆಲ್‍ಗಳು, ಕಚೇರಿಗಳು ಮತ್ತಿತರ ಪ್ರದೇಶಗಳಲ್ಲಿ ಒಂದು ಲಕ್ಷ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಲು ಉದ್ದೇಶಿಸಲಾಗಿದ್ದು, ಸಂಬಂಧಪಟ್ಟ ಇಲಾಖಾಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದರು. ನಗರದ ಹೊರವಲಯದಲ್ಲಿ ನಿರ್ಮಾಣವಾಗಿರುವ ಹೊಸ ನ್ಯಾಯಾಲಯ ಕಟ್ಟಡದ ಸುತ್ತ ಒಂದು ಸಾವಿರ ಗಿಡ ನೆಡಲು ಉದ್ದೇಶಿಸ ಲಾಗಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಏಪ್ರಿಲ್, ಮೇ, ಜೂನ್ ತಿಂಗಳಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಜೊತೆಗೂಡಿ ನಡೆಸುವಂತಾಗಬೇಕು. ಕಾನೂನು ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತೆ ಡಿ. ಪವನೇಶ್ ಅವರು ಮನವಿ ಮಾಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ ಅವರು ಬಡವರಿಗೆ ಕಾನೂನಿನ ಅರಿವು ಮೂಡಿಸುವದರ ಜೊತೆಗೆ ಆಸ್ತಿ ವಿವಾದ, ವೈವಾಹಿಕ ಸಮಸ್ಯೆ ಮತ್ತಿತರ ಪ್ರಕರಣಗಳನ್ನು ಇತ್ಯರ್ಥಪಡಿಸಲು ವಿಶೇಷ ಲೋಕ ಅದಾಲತ್ ನಡೆಸಲಾಗುತ್ತದೆ. ಇದರ ಸದುಪಯೋಗ ಪಡಿಸಿಕೊಳ್ಳುವಂತಾಗ ಬೇಕು. ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಹಿರಿಯ ನಾಗರಿಕರು ಮುಂದಾಗಬೇಕಿದೆ ಎಂದರು.
ಮಡಿಕೇರಿ ತಾಲೂಕಿನಲ್ಲಿ 40 ರಿಂದ 50 ಹಿರಿಯ ನಾಗರಿಕರ ಪ್ರಕರಣಗಳನ್ನು ಗುರುತಿಸಲಾಗಿದೆ. ಈ ಮೂಲಕ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವದು ಎಂದರು. ಜಿ.ಪಂ. ಸಿಇಒ ಕೆ. ಲಕ್ಷ್ಮಿಪ್ರಿಯಾ ಅವರು ಕಾನೂನು ಸೇವಾ ಪ್ರಾಧಿಕಾರ ಮೂಲಕ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ನಡೆಸುವ ಕಾರ್ಯಕ್ರಮಗಳಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವದು ಎಂದು ಅವರು ತಿಳಿಸಿದರು. ವಕೀಲರ ಸಂಘದ ಉಪಾಧ್ಯಕ್ಷ ಪ್ರೀತಂ, ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು, ಹಿರಿಯ ಸಿವಿಲ್ ನ್ಯಾಯಾಧೀಶ ವಿಜಯಕುಮಾರ್ ಅವರು ಕಾರ್ಯಕ್ರಮ ಆಯೋಜನೆ ಬಗ್ಗೆ ಹಲವು ಸಲಹೆ ನೀಡಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಬಿ.ಕೆ. ಮನು, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಸ್ಮಿತಾ, ಸರ್ಕಾರಿ ಅಭಿಯೋಜಕರಾದ ಕೃಷ್ಣವೇಣಿ, ಜಿಲ್ಲಾ ಸರ್ಕಾರಿ ವಕೀಲ ಶ್ರೀಧರ್ ನಾಯರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ. ಆನಂದ್, ಬಂಧಿಖಾನೆ ಇಲಾಖೆಯ ಕೃಷ್ಣಮೂರ್ತಿ, ಸರ್ಕಲ್ ಇನ್ಸ್‍ಪೆಕ್ಟರ್ ನಾಗೇಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಭಾರತಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೆಹರು ಇತರರು ಹಾಜರಿದ್ದರು.