ಜಿಲ್ಲೆಯ 6832 ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ ಮಡಿಕೇರಿ, ಏ. 29 : ಇಂದು ಎಸ್ ಎಸ್ ಎಲ್ ಸಿ ಫಲಿತಾಂಶ ಅಂತರ್ಜಾಲದಲ್ಲಿ ಪ್ರಕಟಗೊಳ್ಳುತ್ತಿದ್ದು, ಜಿಲ್ಲೆಯ 6832 ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರಗೊಳ್ಳಲಿದೆ. ಜಿಲ್ಲೆಯ 27 ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 6,725 ವಿದ್ಯಾರ್ಥಿಗಳ ಜತೆಗೆ 107 ವಿದ್ಯಾರ್ಥಿಗಳು ಖಾಸಗಿಯಾಗಿ ಪರೀಕ್ಷೆ ಎದುರಿಸಿದ್ದರು. ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವು ಏಪ್ರಿಲ್ 30ರಂದು (ಇಂದು) ಬೆಳಿಗ್ಗೆ 12 ಗಂಟೆಗೆ ಪ್ರಕಟವಾಗಲಿದೆ ಎಂದು ಪ್ರೌಢ ಶಿಕ್ಷಣ ಮಂಡಳಿ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
(ಮೊದಲ ಪುಟದಿಂದ) ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಎಲ್ಲಾ ಪ್ರಕ್ರಿಯೆಗಳು ಡಿಜಿಟಲೀಕರಣಗೊಳ್ಳುತ್ತಿರುವದರಿಂದ ಶೀಘ್ರವಾಗಿ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಮೇ 2ರಂದು ಫಲಿತಾಂಶ ಪ್ರಕಟಿಸುವ ಬಗ್ಗೆ ಮೊದಲು ನಿರ್ಧಾರವಾಗಿತ್ತು. ಆದರೆ, ದಿಢೀರ್ ಆಗಿ ದಿನಾಂಕ ಬದಲಾಗಿದೆ.
10ನೇ ತರಗತಿ ಪರೀಕ್ಷೆ ಫಲಿತಾಂಶವನ್ನು ಘೋಷಿಸಿದ ಬಳಿಕ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‍ಸೈಟ್‍ನಲ್ಲಿ ಮಧ್ಯಾಹ್ನದ ಬಳಿಕ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಫಲಿತಾಂಶಗಳ ವೆಬ್‍ಸೈಟ್ ಮೂಲಕ ಅಂಕಪಟ್ಟಿಯನ್ನು ಡೌನ್‍ಲೋಡ್ ಮಾಡಿಕೊಳ್ಳುವ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.