ಮಡಿಕೇರಿ, ಮೇ 3: ಉತ್ತಮ ಸಮಾಜ ನಿರ್ಮಾಣ ಮಾಡುವಂತಾಗಲು ಪ್ರತಿಯೊಬ್ಬರೂ ಕಾನೂನಿನ ಅರಿವು ಮತ್ತು ನೆರವು ಪಡೆಯುವಂತಾಗಬೇಕು ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ತಿಳಿಸಿದ್ದಾರೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ವಾರ್ತಾ ಮತ್ತು ಪ್ರಚಾರ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಕಾನೂನು ಸಾಕ್ಷರತಾ ರಥದ ಮೂಲಕ ವಿಶೇಷ ಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಾನೂನು ಸಾಕ್ಷರತಾ ರಥವು ಗ್ರಾಮೀಣ ಹಾಗೂ ಹಾಡಿ ಪ್ರದೇಶಗಳಿಗೆ ತೆರಳಿ ಕಾನೂನಿನ ಬಗ್ಗೆ ಅರಿವು ಮೂಡಿಸಲಿದ್ದು, ಇದರ ಸದುಪಯೋಗ ಪಡೆದುಕೊಳ್ಳು ವಂತಾಗಬೇಕು ಎಂದು ನ್ಯಾಯಾಧೀಶರು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ವಿಜಯಕುಮಾರ್, ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ಸ್ಮಿತಾ ನಾಗಲಾಪುರ್, ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್, ಸರ್ಕಾರಿ ವಕೀಲರಾದ ಎಂ. ಶ್ರೀಧರ್ ನಾಯರ್, ವಕೀಲೆ ಕೆ.ಎಂ. ಮೀನಾ ಕುಮಾರಿ, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳಾದ ಫಾತಿಮಾ, ಜಾಯ್ಸ್ ಮೆನೇಜಸ್ ಇತರರು ಇದ್ದರು. ಕಾನೂನು ಸೇವಾ ಪ್ರಾಧಿಕಾರದ ಜಯಪ್ಪ ವಂದಿಸಿದರು.