ಸಿದ್ದಾಪುರ, ಮೇ 5: ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಕೈಗೊಂಡಿದ್ದಾರೆ.

ಸಿದ್ದಾಪುರದ ಬೀಟಿಕಾಡು ಕಾಫಿ ತೋಟದಲ್ಲಿ ಕಳೆದ ಕೆಲ ದಿನಗಳಿಂದ ಬೀಡುಬಿಟ್ಟು ದಾಂಧಲೆ ನಡೆಸುತ್ತಿದ್ದ 4 ಮರಿ ಆನೆಗಳು ಸೇರಿದಂತೆ 10 ಕ್ಕೂ ಅಧಿಕ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಕಾಡಾನೆಗಳ ಹಿಂಡು ಕಾಫಿ ತೋಟಗಳಲ್ಲಿ ಬೆಳೆಯನ್ನು ನಾಶ ಮಾಡುತ್ತಿದ್ದು, ಕಾರ್ಮಿಕರು ಭಯದಿಂದಲೇ ಕೆಲಸ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಕಾಡಾನೆಗಳನ್ನು ಕಾಡಿಗಟ್ಟಿದರೂ ಕೂಡ ಮರಳಿ ತೋಟಗಳಿಗೆ ಬರುತ್ತಿರುವದು ಅರಣ್ಯ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ.

ಗುಹ್ಯ ಗ್ರಾಮದ ವಿಜಯ ಎಸ್ಟೇಟ್, ಏಂಜಲ್ ಫೀಲ್ಡ್ ತೋಟಗಳಲ್ಲಿಯೂ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಬಾಳೆ, ಅಡಿಕೆ ಸೇರಿದಂತೆ ಬೆಳೆಗಳನ್ನು ನಾಶ ಮಾಡುತ್ತಿದೆ. ರಾತ್ರಿ ವೇಳೆಯಲ್ಲಿ ಕಾಡಾನೆಗಳ ಹಿಂಡು ರಸ್ತೆಯಲ್ಲಿ ಕಾಣಿಸಿಕೊಳ್ಳುತ್ತಿದ್ದು, ಪ್ರಯಾಣಿಕರೂ ಕೂಡ ಭಯದಿಂದಲೇ ಸಾಗಬೇಕಾದ ಸ್ಥಿತಿ ನಿಮಾಣವಾಗಿದೆ. ಕಾಡಾನೆಗಳನ್ನು ಶಾಶ್ವತವಾಗಿ ಕಾಡಿಗಟ್ಟಬೇಕೆಂದು ಬೆಳೆಗಾರರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.