ಮಡಿಕೇರಿ, ಮೇ 5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಯುನೆಸೆಫ್ ವತಿಯಿಂದ ಶನಿವಾರ ‘ಸಮಗ್ರ ಕೊಡಗು ಸ್ಪಂದನಾ ಯೋಜನೆ’ ಕುರಿತು ವಿಚಾರ ಸಂಕಿರಣವು ನಗರದ ಜಿಲ್ಲಾ ಆಸ್ಪತ್ರೆಯ ಸಭಾಂಗಣದಲ್ಲಿ ಜರುಗಿತು.
ವಿಚಾರ ಸಂಕಿರಣಕ್ಕೆ ಚಾಲನೆ ನೀಡಿದ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಮಾತನಾಡಿ ಪ್ರಾಕೃತಿಕ ವಿಕೋಪ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಗತ್ಯ ತುರ್ತು ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು.
ವೈದ್ಯಕೀಯ ಕಾಲೇಜಿನ ವೈದ್ಯರು, ಎಲ್ಲಾ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳ ಎಲ್ಲಾ ಹಂತದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದರು.
ಬೆಂಗಳೂರು ವೈದ್ಯಕೀಯ ಮಹಾ ವಿದ್ಯಾಲಯದ ಪ್ರೊ. ರಂಗನಾಥ್ ಮಾತನಾಡಿ, ಆಸ್ಪತ್ರೆಗಳಲ್ಲಿ ಇರುವ ಸೌಲಭ್ಯಗಳನ್ನು ಬಳಸಿಕೊಂಡು ಆರೋಗ್ಯ ಸೇವೆ ಕಲ್ಪಿಸಲು ಮುಂದಾಗಬೇಕಿದೆ. ಆ ನಿಟ್ಟಿನಲ್ಲಿ ಎಲ್ಲರೂ ತಂಡೋಪಾದಿ ಯಾಗಿ ಕಾರ್ಯನಿರ್ವಹಿಸಬೇಕು ಎಂದರು. ಯುನೆಸೆಫ್ ಸಂಸ್ಥೆಯ ಜಿಲ್ಲಾ ಸಂಯೋಜಕರಾದ ಪ್ರಭಾತ್ ಮಾತನಾಡಿ ಅತಿವೃಷ್ಟಿ ಹಾಗೂ ಇತರೆ ಸಂದರ್ಭದಲ್ಲಿ ತೀವ್ರ ಹಾನಿಗೊಳಗಾದವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಆರೋಗ್ಯ ಸೇವೆ ಕಲ್ಪಿಸುವದು ಅಗತ್ಯ ಎಂದರು.
ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶಾಲ್ ವೈದ್ಯಕೀಯ ಕಾಲೇಜಿನ ಸ್ಥಾನಿಕ ವೈದ್ಯಾಧಿಕಾರಿ ಮಂಜುನಾಥ್ ಇತರರು ಹಲವು ಮಾಹಿತಿ ನೀಡಿದರು, ವೈದ್ಯಾಧಿಕಾರಿಗಳು, ಶುಶ್ರೂಷಕರು ಇತರರು ಇದ್ದರು.