ಸೋಮವಾರಪೇಟೆ, ಮೇ 7: ಪಟ್ಟಣದಲ್ಲಿರುವ ಶ್ರೀ ಸೋಮೇಶ್ವರ ದೇವಾಲಯ ಶತಮಾನೋತ್ಸವ ಸಂಭ್ರಮದಲ್ಲಿದ್ದು, ಈ ಪ್ರಯುಕ್ತ ತಾ. 9 ರಿಂದ 12ರವರೆಗೆ ನಾಲ್ಕು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ದೇವಾಲಯಕ್ಕೆ 100 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಲಾಗಿದೆ. ತಾ. 9 ರಂದು ಬೆಳಿಗ್ಗೆ 5.30ರಿಂದ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. 6 ಗಂಟೆಗೆ ಗಣಪತಿ ಹೋಮ, 8.30ರಿಂದ ಶಂಕರ ಜಯಂತಿ ಪ್ರಯುಕ್ತ ವಿಶೇಷ ಪೂಜೆ, ನಂತರ ಮಂಗಳವಾದ್ಯ, ಡೊಳ್ಳುಕುಣಿತ ಹಾಗೂ ವೀರಗಾಸೆಯೊಂದಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಶಂಕರಾಚಾರ್ಯರ ಭಾವಚಿತ್ರವನ್ನು ಮೆರವಣಿಗೆ ಮಾಡಲಾಗುವದು ಎಂದು ತಿಳಿಸಿದರು.
ಸಂಜೆ 4 ಗಂಟೆಗೆ ಇಲ್ಲಿನ ನಂಜಮ್ಮ ಕಲ್ಯಾಣ ಮಂಟಪದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭ ಕ್ಷೇತ್ರದ ಶಾಸಕ ಅಪ್ಪಚ್ಚು ರಂಜನ್ ಶತಮಾನೋತ್ಸವ ನಿಲಯ ಸೋಮೇಶ್ವರ ಕೃಪಾದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್ ಸಿಂಹ, ಶೃಂಗೇರಿ ಶಂಕರಾತತ್ವದ ಪ್ರಚಾರಕ ಕೃಷ್ಣಮೂರ್ತಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.
ತಾ. 10ರಂದು ಸಂಜೆ 6ಗಂಟೆಗೆ ಅಂತರ್ರಾಷ್ಟ್ರೀಯ ಖ್ಯಾತಿಯ ಇಂದುಶ್ರೀ ರವೀಂದ್ರ ಅವರಿಂದ ಮಾತನಾಡುವ ಗೊಂಬೆ (ಡಿಂಕು) ಕಾರ್ಯಕ್ರಮ ನಡೆಯಲಿದೆ. ತಾ. 11ರಂದು ಬ್ರಾಹ್ಮಣ ಸಮಾಜ ಬಾಂಧವರಿಗೆ ವಿವಿಧ ಕ್ರೀಡಾಕೂಟಗಳನ್ನು ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ. ಸಂಜೆ 6.30ಕ್ಕೆ ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ, ಸ್ಥಳೀಯ ರಮ್ಯಶ್ರೀ ಹಾಗೂ ಮೈಸೂರಿನ ವರ್ಷಿಣಿಯವರಿಂದ ನೃತ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ತಾ.12ರಂದು ಬೆಳಿಗ್ಗೆ 10.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಅಖಿಲ ಭಾರತ ಬ್ರಾಹ್ಮಣ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಪುತ್ತೂರಾಯ ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ‘ಶಕ್ತಿ’ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ಬ್ರಾಹ್ಮಣ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಗೋಪಾಲಕೃಷ್ಣ, ರಾಜ್ಯ ಸಮಿತಿಯ ಸುಧೀಂದ್ರಕುಮಾರ್ ಮತ್ತಿತರರು ಉಪಸ್ಥಿತರಿರುವರು ಎಂದರು.
ಗೋಷ್ಠಿಯಲ್ಲಿ ಸಮಾಜದ ಉಪಾಧ್ಯಕ್ಷ ಕೌಶಿಕ್, ಕಾರ್ಯದರ್ಶಿ ಎಸ್.ಡಿ. ವಿಜೇತ, ಖಜಾಂಚಿ ಶ್ಯಾಮ್‍ಸುಂದರ್, ನಿಕಟಪೂರ್ವ ಅಧ್ಯಕ್ಷ ಎಸ್.ಆರ್. ಸೋಮೇಶ್ ಉಪಸ್ಥಿತರಿದ್ದರು.