ಮಡಿಕೇರಿ, ಮೇ 9: ಕೊಡಗು ಜಿಲ್ಲೆಯಲ್ಲಿ ಕೌಟುಂಬಿಕ ದೌರ್ಜನ್ಯ ತಡೆಗಟ್ಟುವದರೊಂದಿಗೆ, ಬಾಲ್ಯ ವಿವಾಹದಂತಹ ಸಾಮಾಜಿಕ ಪಿಡುಗುಗಳಿಗೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಂಬಂಧಿಸಿದ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ. ಜಿಲ್ಲಾ ಆಡಳಿತ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಹಾಡಿಯ ಜನರ ಸಹಿತ ಮಹಿಳೆಯರು ಮತ್ತು ಮಕ್ಕಳ ಬಗ್ಗೆ ಎಲ್ಲಾ ರೀತಿಯ ಸುರಕ್ಷಾ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ 174 ಕೌಟುಂಬಿಕ ದೌರ್ಜನ್ಯಗಳು ಸಂಭವಿಸಿದ್ದು, ಈ ಪೈಕಿ 84 ಪ್ರಕರಣ ಇತ್ಯರ್ಥಗೊಂಡು 90 ಬಾಕಿ ಉಳಿದಿರುವ ಬಗ್ಗೆ ಪ್ರಸ್ತಾಪಗೊಂಡಿತು. ಈ ದಿಸೆಯಲ್ಲಿ ಜಿಲ್ಲಾಧಿಕಾರಿ ಅಗತ್ಯ ಕ್ರಮ ವಹಿಸಲು ಸೂಚನೆ ನೀಡಿದರು.
ಬಾಲ್ಯ ವಿವಾಹ ತಡೆಯುವಲ್ಲಿ ಜಿಲ್ಲೆಯ ಎಲ್ಲಾ ಹಾಡಿಗಳಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ. ಬಾಲ್ಯ ವಿವಾಹ ತಡೆಯುವಲ್ಲಿ ನಿರ್ವಹಿಸಬೇಕಾದ ಕ್ರಮಗಳ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಹಿಳಾ ಗ್ರಾಮ ಸಭೆಗಳನ್ನು ನಡೆಸಿ ಜಾಗೃತಿ ಮೂಡಿಸಬೇಕು. ಅಂಗನವಾಡಿ ಮೇಲ್ವಿಚಾರಕರು ಮತ್ತು ಆಶಾ ಕಾರ್ಯಕರ್ತರು ಬಾಲ್ಯ ವಿವಾಹ ತಡೆಯುವ ಬಗ್ಗೆ ಜಾಗೃತಿ ಮೂಡಿಸುವಂತೆ ಅವರು ತಿಳಿಸಿದರು.
ಬಾಲ್ಯ ವಿವಾಹ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲು ಮಾಡುವದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಈ ಬಗ್ಗೆ ಮಾತನಾಡಿದ ವಕೀಲೆ ಮೀನಾಕುಮಾರಿ ಎಫ್‍ಐಆರ್ ದಾಖಲಿಸಿದ್ದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಮಾಹಿತಿ ನೀಡಬೇಕಿದೆ. ಇದರಿಂದಾಗಿ ಯಾರೂ ಸಹ ಎಫ್‍ಐಆರ್ ದಾಖಲಿಸಲು ಮುಂದೆ ಬರುತ್ತಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು. ಬಾಲ್ಯ ವಿವಾಹ ತಡೆಯುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಮುದಾಯದ ಪ್ರತಿನಿಧಿಗಳ ವಿಶ್ವಾಸ ಪಡೆದು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಹೇಳಿದರು.
‘ಹಾಡಿಯ ಮಕ್ಕಳಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಪ್ರತಿಯೊಬ್ಬರೂ ಶಿಕ್ಷಣ ಪಡೆದಾಗ ಜಾಗೃತಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಹಾಡಿಯ ಮಕ್ಕಳು 5ನೇ ತರಗತಿಯಿಂದಲೇ ವಿದ್ಯಾರ್ಥಿ ನಿಲಯಕ್ಕೆ ಪ್ರವೇಶ ಮಾಡುವಂತಾಗಬೇಕು ಎಂದು ಅವರು ಹೇಳಿದರು.’
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅರುಂಧತಿ ಈ ವರ್ಷ ಎರಡು ಬಾಲ್ಯ ವಿವಾಹ ಪ್ರಕರಣ ವರದಿಯಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್ ಬಾಲ್ಯ ವಿವಾಹ ತಡೆಯುವಲ್ಲಿ ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಲಾಗುತ್ತದೆ ಎಂದು ಹೇಳಿದರು. ಆರು ತಿಂಗಳಿಗಿಂತಲೂ ಹೆಚ್ಚು ಕಾಲ ಇರುವ ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಅರುಂಧತಿ 2018-19 ನೇ ಸಾಲಿನಲ್ಲಿ 174 ಪ್ರಕರಣಗಳು ದಾಖಲಾಗಿದ್ದು, 84 ಪ್ರಕರಣಗಳು ಇತ್ಯರ್ಥಗೊಂಡಿದ್ದು, 90 ಪ್ರಕರಣಗಳು ಬಾಕಿ ಇವೆ, 13 ಪ್ರಕರಣಗಳು ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ ಎಂದರು.
ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಅನುಷ್ಠಾನದಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆ ನಿಟ್ಟಿನಲ್ಲಿ ಅರ್ಹರಿಗೆ ಆಧಾರ್ ಕಾರ್ಡ್ ಕೊಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಅಂಗನವಾಡಿಗಳಿಗೆ ಎಂಎಸ್‍ಪಿಟಿಸಿಯಿಂದ ವಿತರಿಸಲಾಗುತ್ತಿರುವ ಆಹಾರ ಗುಣಮಟ್ಟದಿಂದ ಕೂಡಿರಬೇಕು. ಸಕಾಲದಲ್ಲಿ ಆಹಾರ ಪೂರೈಕೆ ಮಾಡಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ಮಾತೃಪೂರ್ಣ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು, ಅರ್ಹರಿಗೆ ಪೌಷ್ಠಿಕ ಆಹಾರವನ್ನು ಸಮರ್ಪಕವಾಗಿ ವಿತರಿಸುವಂತೆ ಹೇಳಿದರು.
ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ಬಾಲ್ಯ ವಿವಾಹ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಕೌಟುಂಬಿಕ ದೌರ್ಜನ್ಯ ಆಗದಂತೆ ಜಾಗೃತಿ ಮೂಡಿಸಬೇಕು. ಮಾತೃವಂದನಾ ಯೋಜನೆ ಅನುಷ್ಠಾನದಲ್ಲಿ ಗಮನಹರಿಸುವಂತೆ ಅವರು ಸೂಚಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪನ್ನೇಕರ್, ಸಿಡಿಪಿಒ ಸೀತಾಲಕ್ಷ್ಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆಯ ಆರ್‍ಸಿಎಚ್ ಅಧಿಕಾರಿ ಡಾ.ಆನಂದ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಭಾರತಿ, ಪೌರಾಯುಕ್ತÀ ಎಂ.ಎಲ್.ರಮೇಶ್ ಇತರರು ಇದ್ದರು.